×
Ad

‘ನೇಕಾರರ ಆತ್ಮಹತ್ಯೆ ಪ್ರಕರಣ’ 5 ಲಕ್ಷ ಪರಿಹಾರ ವಿತರಿಸುವ ಬಗ್ಗೆ ಸಿಎಂ ಜತೆ ಚರ್ಚೆ: ಶಿವಾನಂದ ಪಾಟೀಲ್

Update: 2025-03-18 19:23 IST

ಬೆಂಗಳೂರು : ನೇಕಾರರ ಆತ್ಮಹತ್ಯೆ ಪ್ರಕರಣಗಳಲ್ಲಿ ಮೃತರ ಕುಟುಂಬದವರಿಗೆ 5ಲಕ್ಷ ರೂ. ಪರಿಹಾರ ವಿತರಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ಮಾಡಲಾಗುವುದು ಎಂದು ಜವಳಿ ಸಚಿವ ಶಿವಾನಂದ ಪಾಟೀಲ್ ಭರವಸೆ ನೀಡಿದ್ದಾರೆ.

ಮಂಗಳವಾರ ಪರಿಷತ್ತಿನ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯೆ ಉಮಾಶ್ರೀ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕೇಂದ್ರ ಸರಕಾರದಿಂದ ಪ್ರಧಾನ ಮಂತ್ರಿ ಭಿಮಾ ಯೋಜನೆಯಲ್ಲಿ 2 ಲಕ್ಷ ರೂ. ಪರಿಹಾರ ವಿತರಣೆ ಯೋಜನೆ ಜಾರಿಯಲ್ಲಿದ್ದು, ಈ ಯೋಜನೆಯ ವಿಮಾ ಕಂತನ್ನು ರಾಜ್ಯ ಸರಕಾರವೇ ಭರಿಸುತ್ತಿದೆ. ಈ 2 ಲಕ್ಷ ರೂ.ಗಳೊಂದಿಗೆ, ಮುಖ್ಯಮಂತ್ರಿ ಪರಿಹಾರ ನಿಧಿಯಿಂದಲೂ 3 ಲಕ್ಷ ರೂ. ಪರಿಹಾರ ವಿತರಣೆ ಮಾಡುವ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚಿಸುತ್ತೇನೆ ಎಂದು ಹೇಳಿದರು.

ಆತ್ಮಹತ್ಯೆ ಮಾಡಿಕೊಂಡ ರೈತರಿಗೆ ಪರಿಹಾರ ವಿತರಣೆ ಮಾಡುವ ಯೋಜನೆ ಜಾರಿಯಲ್ಲಿ ಇರಲಿಲ್ಲ. ಆದರೆ, ಕೋವಿಡ್ ಅವಧಿಯಲ್ಲಿ 25 ಮೃತ ನೇಕಾರರ ಕುಟುಂಬಗಳಿಗೆ ತಲಾ 5 ಲಕ್ಷ ರೂ.ಗಳಂತೆ 1.25 ಕೋಟಿ ರೂ. ಪರಿಹಾರ ವಿತರಿಸಲಾಗಿದೆ. ಈ ಪರಿಹಾರ ವಿತರಣೆ ಯೋಜನೆ ಮುಂದುವರಿಕೆಗೆ ಆರ್ಥಿಕ ಇಲಾಖೆ ಅನುಮೋದನೆಗೆ ಪ್ರಯತ್ನಿಸಲಾಗುವುದು ಎಂದು ಶಿವಾನಂದ ಪಾಟೀಲ್ ಹೇಳಿದರು.

ಆತ್ಮಹತ್ಯೆ ಮಾಡಿಕೊಂಡ ನೇಕಾರನ ಪತ್ನಿಗೆ ಪಿಂಚಣಿ ಅಥವಾ ಮೃತರ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವ ಯೋಜನೆ ಇಲ್ಲ. ಆದರೆ, 2,500 ರೂ.ಗಳಿಂದ 11,000 ರೂ.ಗಳವರೆಗೆ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. 2022-23ನೇ ಸಾಲಿನಲ್ಲಿ 3,664 ವಿದ್ಯಾರ್ಥಿಗಳಿಗೆ 1.63 ಕೋಟಿ ರೂ. ಹಾಗೂ 2023-24ನೇ ಸಾಲಿನಲ್ಲಿ 3,689 ವಿದ್ಯಾರ್ಥಿಗಳಿಗೆ 1.99 ಕೋಟಿ ರೂ. ವಿದ್ಯಾರ್ಥಿ ವೇತನವನ್ನು ಡಿಬಿಟಿ ಮೂಲಕ ವರ್ಗಾವಣೆ ಮಾಡಲಾಗಿದೆ ಎಂದು ಶಿವಾನಂದ ಪಾಟೀಲ್ ವಿವರಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News