×
Ad

‘ರಾಜ್ಯದ ಒಂದೇ ಒಂದು ಗ್ರಾಮದಲ್ಲೂ ಕುಡಿಯುವ ನೀರಿಗೆ ಸಮಸ್ಯೆ ಆಗಬಾರದು’ ; ಜಿಲ್ಲಾಧಿಕಾರಿ-ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಸಿಎಂ ಸೂಚನೆ

Update: 2025-05-05 20:18 IST

ಬೆಂಗಳೂರು : ಶುದ್ಧ ಕುಡಿಯುವ ನೀರಿಗೆ ರಾಜ್ಯದ ಒಂದೇ ಒಂದು ಗ್ರಾಮದಲ್ಲೂ ಸಮಸ್ಯೆ ಆಗಬಾರದು ಎಂದು ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಸೂಚನೆ ನೀಡಿದರು.

ಸೋಮವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ರಾಜ್ಯದ ಆಯ್ದ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಅವರು ವಿಡಿಯೋ ಸಂವಾದ ನಡೆಸಿದರು.

ರಾಜ್ಯದಲ್ಲಿ ಎಲ್ಲಿಯೂ ಕುಡಿಯುವ ನೀರಿಗೆ ಯಾವುದೇ ಕಾರಣಕ್ಕೂ ತೊಂದರೆಯಾಗಬಾರದು. ಕುಡಿಯುವ ನೀರಿನ ನಿರ್ವಹಣೆಗೆ ಯಾವುದೇ ಹಣಕಾಸಿನ ಕೊರತೆ ಇಲ್ಲ. ಪಂಚಾಯತ್ ರಾಜ್ ಇಲಾಖೆಗೆ 60 ಕೋಟಿ ರೂ. ಈಗಾಗಲೇ ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಜಿಲ್ಲೆಗಳಲ್ಲಿ ತುರ್ತು ಕುಡಿಯುವ ನೀರಿನ ಪೂರೈಕೆಗೆ ಜಿಲ್ಲಾಧಿಕಾರಿಗಳು ಕ್ರಿಯಾ ಯೋಜನೆ ರೂಪಿಸಿ, ಟಾಸ್ಕ್ ಫೋರ್ಸ್‍ನಿಂದ ಅನುಮೋದನೆ ಪಡೆದುಕೊಂಡು ಅನುಷ್ಠಾನಗೊಳಿಸಲು ಸೂಚನೆ ನೀಡಿದ ಮುಖ್ಯಮಂತ್ರಿ, ಪ್ರತಿ ವರ್ಷ ಕುಡಿಯುವ ನೀರಿನ ತೊಂದರೆ ಎದುರಿಸುತ್ತಿರುವ ಗ್ರಾಮಗಳಲ್ಲಿ ಸಮಸ್ಯೆಯನ್ನು ಶಾಶ್ವತವಾಗಿ ನೀಗಿಸಲು ಯೋಜನೆ ರೂಪಿಸುವಂತೆ ತಿಳಿಸಿದರು.

ಅಗತ್ಯಬಿದ್ದರೆ ಮಾತ್ರ ಬೋರ್‌ವೆಲ್‍ಗಳನ್ನು ಕೊರೆಯಬೇಕು. ಯಾವುದೇ ಕಾರಣಕ್ಕೂ ಅನಗತ್ಯವಾಗಿ ಬೋರ್‌ ವೆಲ್ ಕೊರೆದು ವೆಚ್ಚ ಮಾಡಬಾರದು ಎಂದು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ ಸಿದ್ದರಾಮಯ್ಯ, ರಾಜ್ಯದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ವಾಡಿಕೆಗಿಂತ ಶೇ.55ರಷ್ಟು ಮುಂಗಾರು ಪೂರ್ವ ಹೆಚ್ಚು ಮಳೆಯಾಗಿದೆ. ವಾಡಿಕೆಗಿಂತ ಯಾವುದೇ ಜಿಲ್ಲೆಯಲ್ಲಿ ವಾಡಿಕೆಗಿಂತ ಕಡಿಮೆ ಮಳೆ ದಾಖಲಾಗಿಲ್ಲ ಎಂದು ಹೇಳಿದರು.

27 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಎಲ್ಲಾ ಜಲಾಶಯಗಳಲ್ಲಿ ಶೇ.50ರಿಂದ ಶೇ.60 ರಷ್ಟು ಹೆಚ್ಚಿನ ನೀರಿನ ಸಂಗ್ರಹವಿದೆ. ಈ ವರ್ಷ ವಾಡಿಕೆಗಿಂತ ಹೆಚ್ಚು ಮುಂಗಾರು ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಗಾರು ವಿಳಂಬವಾದರೆ 6319 ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗಬಹುದು ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ಮುಖ್ಯಮಂತ್ರಿಗೆ ಮಾಹಿತಿ ನೀಡಿದರು.

ಪ್ರಸಕ್ತ 551 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, 123 ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಅಗತ್ಯ ಸಂದರ್ಭದಲ್ಲಿ ನೀರು ಪಡೆಯಲು ಈಗಾಗಲೇ 3 ಸಾವಿರ ಖಾಸಗಿ ಬೋರ್‌ವೆಲ್‍ಗಳನ್ನು ಗುರುತಿಸಲಾಗಿದ್ದು, 480 ಬೋರ್‌ ವೆಲ್‍ಗಳನ್ನು ಖಾಸಗಿಯವರಿಂದ ಬಾಡಿಗೆ ಪಡೆದು ನೀರು ಒದಗಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಇಂಧನ ಸಚಿವ ಕೆ.ಜೆ.ಜಾರ್ಜ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್, ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್, ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಅಪರ ಮುಖ್ಯಕಾರ್ಯದರ್ಶಿ ಎಲ್.ಕೆ.ಅತೀಕ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News