ಬೆಂಗಳೂರು: ಕಲ್ಯಾಣ ಕರ್ನಾಟಕದ ಅಭಿವೃದ್ಧಿಯಲ್ಲಿ ಸಂವಿಧಾನದ 371(ಜೆ)ನೇ ವಿಧಿಯ ತಿದ್ದುಪಡಿ ಐತಿಹಾಸಿಕ ಮಹತ್ವ ಹೊಂದಿದೆ. ಆದರೆ, ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ, ಅಡ್ವಾಣಿಯವರು ಉಪಪ್ರಧಾನಿ ಆಗಿದ್ದರು, ಅಂದು ಹೈದ್ರಾಬಾದ್ ಕರ್ನಾಟಕಕ್ಕೆ ವಿಶೇಷ ಸಾಂವಿಧಾನಿಕ ಪ್ರಾತಿನಿಧ್ಯದ ಬೇಡಿಕೆ ಇಟ್ಟಾಗ ಅದನ್ನು ನಿರಾಕರಿಸಿದ್ದರು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ರವಿವಾರ ನಗರದ ಶೇಷಾದ್ರಿಪುರಂನಲ್ಲಿ ನಡೆದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, 2013ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದಾಗ ಅಂದಿನ ಪ್ರಧಾನಿ ಮನಮೋಹನ್ ಸಿಂಗ್, ಸೋನಿಯಾ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ಪ್ರಯತ್ನ ಮತ್ತು ಒತ್ತಡದ ಫಲವಾಗಿ 371(ಜೆ) ಜಾರಿಗೆ ಬಂದಿತು. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಸಂಬಂಧಿಸಿದ ವರದಿಯನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಲಾಯಿತು ಎಂದರು.

371(ಜೆ) ಕಾಯ್ದೆಯ ಪರಿಣಾಮವಾಗಿ ಕಲ್ಯಾಣ ಕರ್ನಾಟಕದ ಅನೇಕ ಯುವಕರು ವೈದ್ಯರು, ಎಂಜಿನಿಯರ್‍ಗಳು, ಶಿಕ್ಷಕರು ಮತ್ತು ಪ್ರಾಧ್ಯಾಪಕರಾಗಲು ಅವಕಾಶ ದೊರೆತಿದೆ. ಕಲ್ಯಾಣ ಕರ್ನಾಟಕದ ಹಿಂದುಳಿದಿರುವಿಕೆಗೆ ಐತಿಹಾಸಿಕ ಕಾರಣಗಳಿವೆ. ಈ ಪ್ರದೇಶ ಹಿಂದೆ ನಿಜಾಮರ ಆಡಳಿತಕ್ಕೆ ಒಳಪಟ್ಟಿದ್ದರಿಂದ ಮೈಸೂರು ಸಂಸ್ಥಾನದಂತೆ ಮೂಲಸೌಕರ್ಯ, ಶಿಕ್ಷಣ ಮತ್ತು ಕೈಗಾರಿಕಾ ಅಭಿವೃದ್ಧಿಗೆ ಅಗತ್ಯವಾದ ಆದ್ಯತೆ ದೊರೆಯಲಿಲ್ಲ. ಇದರಿಂದ ಕರ್ನಾಟಕದಲ್ಲಿ ಪ್ರಾದೇಶಿಕ ಅಸಮಾನತೆ ನಿರ್ಮಾಣವಾಯಿತು ಎಂದು ಸಿದ್ದರಾಮಯ್ಯ ವಿವರಿಸಿದರು.

ಈ ಅಸಮಾನತೆಯನ್ನು ನಿವಾರಿಸಲು ಎಸ್.ಎಂ.ಕೃಷ್ಣ ಅವರ ಆಡಳಿತಾವಧಿಯಲ್ಲಿ ನಂಜುಂಡಪ್ಪ ಸಮಿತಿ ರಚನೆಯಾಗಿ, ಹಿಂದುಳಿದ ಪ್ರದೇಶಗಳ ಅಭಿವೃದ್ಧಿಗೆ ಶಿಫಾರಸುಗಳನ್ನು ಮಾಡಿತು. ನಂತರ ತಮ್ಮ ಆಡಳಿತಾವಧಿಯಲ್ಲಿ ಗೋವಿಂದರಾವ್ ಸಮಿತಿಯನ್ನು ರಚಿಸಿ, ಪ್ರಾದೇಶಿಕ ಅಸಮಾನತೆಯ ನಿವಾರಣೆಗೆ ಮತ್ತಷ್ಟು ಕ್ರಮಗಳನ್ನು ಕೈಗೊಂಡಿದ್ದಾಗಿ ಸಿದ್ದರಾಮಯ್ಯ ತಿಳಿಸಿದರು.

ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ಅಜಯ್ ಸಿಂಗ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿ, ತಮ್ಮ ಆಡಳಿತಾವಧಿಯಲ್ಲಿ 5,000 ಕೋಟಿ ರೂ. ಅನುದಾನ ನೀಡಲಾಗಿತ್ತು. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಕಲ್ಯಾಣ ಕರ್ನಾಟಕವನ್ನು ಅಭಿವೃದ್ಧಿಯ ಮುಖ್ಯವಾಹಿನಿಗೆ ತರಲು ಪ್ರಯತ್ನಿಸಲಾಗಿತ್ತು. ಪ್ರಾದೇಶಿಕ ಅಸಮಾನತೆ ನಿವಾರಣೆಯಾಗದೆ ಕರ್ನಾಟಕದ ಸಮಗ್ರ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಪ್ರತಿಪಾದಿಸಿದರು.

ಬಾಬಾಸಾಹೇಬ್ ಅಂಬೇಡ್ಕರ್ ಅವರು ಪ್ರತಿಯೊಬ್ಬರಿಗೂ ಆರ್ಥಿಕ ಮತ್ತು ಸಾಮಾಜಿಕ ಶಕ್ತಿ ದೊರೆತಾಗ ಮಾತ್ರ ಸಮಾನತೆಯ ಸಮಾಜ ನಿರ್ಮಾಣ ಸಾಧ್ಯ ಎಂದು ಪ್ರತಿಪಾದಿಸಿದ್ದರು. ಬಸವಣ್ಣ, ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧೀಜಿ ಅವರು ಕನಸು ಕಂಡಿದ್ದು ಜಾತಿ, ಧರ್ಮ ಮತ್ತು ವರ್ಗಗಳ ಆಧಾರದ ಮೇಲೆ ಭೇದಭಾವವಿಲ್ಲದ ಸಮಸಮಾಜದ ನಿರ್ಮಾಣವಾಗಿತ್ತು. ಆದರೆ ಇಂದಿಗೂ ಜಾತೀಯತೆ, ಮೂಢನಂಬಿಕೆ ಮತ್ತು ಕಂದಾಚಾರಗಳು ಸಮಾಜದಲ್ಲಿ ಮುಂದುವರಿದಿರುವುದು ದುರದೃಷ್ಟಕರ ಎಂದು ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು.

12ನೇ ಶತಮಾನದಲ್ಲಿಯೇ ಬಸವಣ್ಣನವರು ‘ಇವನಾರವ ಇವನಾರವ ಎಂದೆನಿಸದಿರಯ್ಯಾ, ಇವ ನಮ್ಮವ ಇವ ನಮ್ಮವ ಎಂದೆನಿಸಯ್ಯಾ’ ಎಂಬ ವಚನದ ಮೂಲಕ ಸಮಾನತೆ ಮತ್ತು ಸಹೋದರತ್ವದ ಸಂದೇಶ ಸಾರಿದ್ದರು. ಆದರೆ ಇಂದಿಗೂ ಜಾತೀಯತೆ ಸಂಪೂರ್ಣವಾಗಿ ನಿರ್ಮೂಲನೆಯಾಗಿಲ್ಲ. ವಿದ್ಯಾವಂತರಲ್ಲಿಯೂ ಜಾತೀಯತೆ ಮತ್ತು ಮೂಢನಂಬಿಕೆಗಳು ಕಂಡುಬರುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ವೈಜ್ಞಾನಿಕ ಮತ್ತು ವೈಚಾರಿಕ ಮನೋಭಾವ ಬೆಳೆಸಿಕೊಳ್ಳುವ ಮೂಲಕ ಇಂತಹ ಮನೋಭಾವನೆಗಳನ್ನು ತೊಡೆದುಹಾಕಬೇಕು ಎಂದು ಸಿದ್ದರಾಮಯ್ಯ ಕರೆ ನೀಡಿದರು.

ಸಾಮಾಜಿಕ ಅಸಮಾನತೆ ಮತ್ತು ಪ್ರಾದೇಶಿಕ ಅಸಮಾನತೆ ಎರಡೂ ನಿವಾರಣೆಯಾದಾಗ ಮಾತ್ರ ಸಮಸಮಾಜ ನಿರ್ಮಾಣ ಸಾಧ್ಯ. ಪ್ರತಿಯೊಬ್ಬರೂ ಪರಸ್ಪರ ಪ್ರೀತಿ, ವಿಶ್ವಾಸ ಮತ್ತು ಮಾನವೀಯತೆಯಿಂದ ಬದುಕಬೇಕು. ದ್ವೇಷದ ಬದಲಿಗೆ ಪ್ರೀತಿ ಮತ್ತು ಸಹಬಾಳ್ವೆಯ ಮನೋಭಾವ ಬೆಳೆಸಿಕೊಳ್ಳಬೇಕು. ಇತಿಹಾಸವನ್ನು ಅರಿತುಕೊಂಡಾಗ ಮಾತ್ರ ಭವಿಷ್ಯವನ್ನು ರೂಪಿಸಲು ಸಾಧ್ಯ ಎಂಬ ಅಂಬೇಡ್ಕರ್ ಅವರ ಚಿಂತನೆಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದು ಸಿದ್ದರಾಮಯ್ಯ ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor