×
Ad

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ | ಅಪರಾಧಿಗಳನ್ನು ಪತ್ತೆ ಹಚ್ಚಿ ಬಂಧಿಸಲು ಸೂಚನೆ : ಸಿಎಂ ಸಿದ್ದರಾಮಯ್ಯ

Update: 2025-05-02 18:19 IST

ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಮಂಗಳೂರಿನ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಅಪರಾಧಿಗಳು ಯಾರೇ ಆಗಿದ್ದರೂ ಕೂಡಲೇ ಅವರನ್ನು ಪತ್ತೆ ಹಚ್ಚಿ ದಸ್ತಗಿರಿ ಮಾಡಿ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ.

ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆಯಾಗಿದ್ದು, ಕೊಲೆಗೀಡಾದ ವ್ಯಕ್ತಿ ರೌಡಿಶೀಟರ್ ಆಗಿದ್ದ ಎಂದು ಪೊಲೀಸರು ತಿಳಿಸಿದ್ದು, ಈ ಬಗ್ಗೆ ಎಡಿಜಿಪಿ(ಕಾನೂನು ಸುವ್ಯವಸ್ಥೆ) ಅವರೊಂದಿಗೆ ಮಾತನಾಡಿ ಅವರನ್ನು ಸ್ಥಳಕ್ಕೆ ಕಳುಹಿಸಿ ಪರಿಶೀಲನೆ ನಡೆಸಲು ನಿರ್ದೇಶನ ನೀಡಿದ್ದೇನೆ ಎಂದರು.

ಬಿಜೆಪಿ ಮತ್ತು ಆರೆಸೆಸ್‌ ನವರಿಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ. ಈ ಬಗ್ಗೆ ಅವರಿಗೆ ಬದ್ಧತೆಯೂ ಇಲ್ಲ. ನೂರು ವರ್ಷಗಳ ಇತಿಹಾಸ ನೋಡಿದರೆ ಅವರು ಯಾವಾಗಲೂ ಸಾಮಾಜಿಕ ನ್ಯಾಯವನ್ನು ವಿರೋಧಿಸುತ್ತಲೇ ಬಂದವರು. ನಾಲ್ವಡಿ ಕೃಷ್ಣರಾಜ ಒಡೆಯರ್ ಮಿಲ್ಲರ್ ಆಯೋಗದಿಂದ ಹಿಡಿದು ಇಂದಿನ ವರೆಗೆ ವಿರೋಧ ಮಾಡುತ್ತಲೇ ಬಂದಿದ್ದಾರೆ. ಆರೆಸೆಸ್ಸ್ 1925ರಂದು ಪ್ರಾರಂಭವಾಗಿದ್ದು 2025ಕ್ಕೆ ನೂರು ವರ್ಷಗಳಾಗುತ್ತಿದೆ. ಅವರು ಮೀಸಲಾತಿಯನ್ನು ಎಂದೂ ಒಪ್ಪಿಲ್ಲ ಎಂದು ಟೀಕಿಸಿದರು.

ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಆಗಬೇಕು. ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಎರಡೂ ವರ್ಷಗಳಿಂದ ಈ ಬಗ್ಗೆ ಒತ್ತಾಯ ಮಾಡುತ್ತಿದ್ದರು. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಇದನ್ನು ಸೇರಿಸಲು ಅವರೇ ಕಾರಣಕರ್ತರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ಮೋದಿಗೆ ಪತ್ರವನ್ನೂ ಬರೆದಿದ್ದರು. ಈ ಎಲ್ಲರ ಹೋರಾಟ ಮತ್ತು ಒತ್ತಡದ ನಂತರ ಜಾತಿಗಣತಿ ಮಾಡುತ್ತೇವೆ ಎಂದು ಕೇಂದ್ರ ಸರಕಾರ ಹೇಳಿದೆ.

ಆದರೆ, ಯಾವಾಗ ಎಂದು ಸಮಯ ನಿಗದಿ ಮಾಡಿಲ್ಲ. ಜನಗಣತಿಯಲ್ಲಿಯೇ ಜಾತಿ ಗಣತಿಯನ್ನು ಮಾಡುವುದಾಗಿ ಹೇಳಿದ್ದಾರೆ. ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಆಗಬೇಕು. ಸಂವಿಧಾನಕ್ಕೆ ತಿದ್ದುಪಡಿ ತಂದು ಮೀಸಲಾತಿಯ ಗರಿಷ್ಠ ಪರಿಮಿತಿಯನ್ನು ಹೆಚ್ಚು ಮಾಡಬೇಕು. ಸುಪ್ರೀಂ ಕೋರ್ಟ್‌ ವಿಭಾಗೀಯ ಪೀಠವು ಮೀಸಲಾತಿ ಶೇ.50ಕ್ಕಿಂತ ಹೆಚ್ಚಬಾರದು ಎಂದು ಹೇಳಿದೆ. ಆದರೆ, ಜನಸಂಖ್ಯೆಯ ಅನುಗುಣವಾಗಿ ಮೀಸಲಾತಿ ನೀಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News