ದಲಿತರ ಹಕ್ಕುಗಳ ಈಡೇರಿಕೆಗೆ ಆಗ್ರಹಿಸಿ ಸಹಿ ಸಂಗ್ರಹ ಅಭಿಯಾನ
ಚಳಿಗಾಲದ ಅಧಿವೇಶನದ ವೇಳೆ ಕೇಂದ್ರಕ್ಕೆ ಮನವಿ ಸಲ್ಲಿಸಲು ಡಿಎಚ್ಎಸ್ ನಿರ್ಧಾರ
ಸಾಂದರ್ಭಿಕ ಚಿತ್ರ
ಬೆಂಗಳೂರು : ದಲಿತರಿಗೆ ಶಿಕ್ಷಣ, ಉದ್ಯೋಗ ಮತ್ತು ಭೂಮಿಯ ಹಕ್ಕುಗಳನ್ನು ಖಾತರಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಸಂಸತ್ತಿನ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ರಾಷ್ಟ್ರಮಟ್ಟದ ಸಹಿ ಸಂಗ್ರಹ ಅಭಿಯಾನ ನಡೆಸಿ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲು ದಲಿತ ಹಕ್ಕುಗಳ ಸಮಿತಿ ಕರ್ನಾಟಕ ಕರೆ ನೀಡಿದೆ.
ಬುಧವಾರ ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಗೋಪಾಲಕೃಷ್ಣ ಹರಳಹಳ್ಳಿ, ದಲಿತ ಶೋಷಣಾ ಮುಕ್ತಿ ಮಂಚ್ನ ಭಾಗವಾಗಿರುವ ದಲಿತ ಹಕ್ಕುಗಳ ಸಮಿತಿಯು, ದೇಶದಾದ್ಯಂತ ದಲಿತರು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಹಾಗೂ ಅವರ ಸಾಂವಿಧಾನಿಕ ಹಕ್ಕುಗಳ ರಕ್ಷಣೆಗೆ ಒತ್ತಾಯಿಸಿ ಈ ಅಭಿಯಾನವನ್ನು ಹಮ್ಮಿಕೊಳ್ಳಲು ಮುಂದಾಗಿದೆ ಎಂದಿದ್ದಾರೆ.
ಎಲ್ಲರಿಗೂ ಶಿಕ್ಷಣ, ಉದ್ಯೋಗ ಮತ್ತು ಭೂಮಿ ಒದಗಿಸಬೇಕು. ಅಸ್ಪೃಶ್ಯತೆ, ಜಾತಿ ತಾರತಮ್ಯ ಮತ್ತು ದೌರ್ಜನ್ಯಗಳನ್ನು ಸಂಪೂರ್ಣವಾಗಿ ತಡೆಗಟ್ಟಬೇಕು. ದಲಿತರ ಮೇಲೆ ದೌರ್ಜನ್ಯ ಎಸಗುವವರ ವಿರುದ್ಧ ಪ್ರತಿದೂರು ದಾಖಲಿಸುವ ಕ್ರಮವನ್ನು ತಡೆಯಬೇಕು. ಮೀಸಲಾತಿ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಕ್ರಮವಾಗಿ ಶೇ.17 ಮತ್ತು ಶೇ.7ರಷ್ಟು ಮೀಸಲಾತಿಯನ್ನು ಹೊರಗುತ್ತಿಗೆ ಉದ್ಯೋಗಗಳಲ್ಲಿಯೂ ಜಾರಿಗೊಳಿಸಬೇಕು. ಮೀಸಲಾತಿಗೆ ಸಂವಿಧಾನಾತ್ಮಕ ರಕ್ಷಣೆ ಒದಗಿಸಲು ಅದನ್ನು ಸಂವಿಧಾನದ ಒಂಬತ್ತನೇ ಅನುಸೂಚಿಗೆ ಸೇರಿಸಬೇಕು ಎಂದು ಗೋಪಾಲಕೃಷ್ಣ ಹರಳಹಳ್ಳಿ ತಿಳಿಸಿದ್ದಾರೆ.
ಖಾಸಗಿ ಕ್ಷೇತ್ರದಲ್ಲಿಯೂ ಮೀಸಲಾತಿ ಜಾರಿಗೊಳಿಸಿ ದಲಿತ ಯುವಜನರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸಬೇಕು. ಸರಕಾರದಲ್ಲಿ ಖಾಲಿ ಇರುವ 2.84 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಬೇಕು. ಬಾಕಿ ಉಳಿದಿರುವ ಬ್ಯಾಕ್ಲಾಗ್ ಹುದ್ದೆಗಳನ್ನು ಭರ್ತಿ ಮಾಡುವುದರ ಜೊತೆಗೆ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು. ಮೀಸಲಾತಿ ನೀತಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ದಲಿತರ ಭೂಮಿಯ ರಕ್ಷಣೆಗೆ ಪಿಟಿಸಿಎಲ್ ಕಾಯ್ದೆಯನ್ನು ಬಲಪಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಗ್ರಾಮೀಣ ಪ್ರದೇಶಗಳಲ್ಲಿ 94ಸಿ ಹಾಗೂ ನಗರ ಪ್ರದೇಶಗಳಲ್ಲಿ 94ಸಿಸಿ ಅಡಿಯಲ್ಲಿ ಮನೆಗಳ ಹಂಚಿಕೆ ಮತ್ತು ಹಕ್ಕುಪತ್ರ ವಿತರಣೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಕೇಂದ್ರ ಸರಕಾರವು ಎಸ್ಸಿ/ಎಸ್ಟಿ ಉಪಯೋಜನೆಯನ್ನು ರಾಷ್ಟ್ರ್ರಮಟ್ಟದಲ್ಲಿ ಜಾರಿಗೊಳಿಸಬೇಕು. ಅನುದಾನ ಕಡಿತವಾಗದಂತೆ ನೋಡಿಕೊಳ್ಳುವುದರ ಜೊತೆಗೆ ದಲಿತರ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ಹೆಚ್ಚಿನ ಅನುದಾನ ಒದಗಿಸಬೇಕು. ಎಸ್ಸಿ/ಎಸ್ಟಿ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ಹೆಚ್ಚಿಸಬೇಕು ಎಂದು ಅವರು ಹೇಳಿದ್ದಾರೆ.
ವಿದ್ಯಾರ್ಥಿ ನಿಲಯಗಳನ್ನು ಉತ್ತಮವಾಗಿ ನಿರ್ವಹಿಸಬೇಕು ಹಾಗೂ ಉನ್ನತ ಶಿಕ್ಷಣಕ್ಕೆ ಇರುವ ಆದಾಯ ಮಿತಿ ತೆಗೆದುಹಾಕಬೇಕು. ಎಸ್ಸಿ-ಎಸ್ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯನ್ನು ಬಲಪಡಿಸಿ, ಪ್ರತಿ ಜಿಲ್ಲೆಯಲ್ಲಿ ತ್ವರಿತ ನ್ಯಾಯಾಲಯ ಸ್ಥಾಪಿಸಬೇಕು. ಮಹಿಳೆಯರಿಗೆ ಯಾವುದೇ ಷರತ್ತುಗಳಿಲ್ಲದೆ ಶೇ.33ರಷ್ಟು ಮೀಸಲಾತಿ ನೀಡಬೇಕು. ಮರ್ಯಾದೆ ಹೆಸರಿನಲ್ಲಿ ನಡೆಯುವ ಹತ್ಯೆಗಳನ್ನು ತಡೆಯಲು ಕಠಿಣ ಕಾನೂನು ರೂಪಿಸಿ ಸಂತ್ರಸ್ತರಿಗೆ ತಕ್ಷಣ ಪರಿಹಾರ ಒದಗಿಸಬೇಕು. ಅಂತರ್ಜಾತಿ ವಿವಾಹಗಳನ್ನು ಪ್ರೋತ್ಸಾಹಿಸಿ, ಅಂತಹ ದಂಪತಿಗಳಿಗೆ ರಕ್ಷಣೆ ಮತ್ತು ಉದ್ಯೋಗ ಭದ್ರತೆ ಒದಗಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.