ಮಹೇಶ್ವರ್ ರಾವ್ 

ಬೆಂಗಳೂರು : ಜಾಲಹಳ್ಳಿ ಕ್ರಾಸ್‍ನಲ್ಲಿ ಕೆಳಸೇತುವೆ ಕಾಮಗಾರಿಯನ್ನು ಶೀಘ್ರವಾಗಿ ಪ್ರಾರಂಭಿಸುವಂತೆ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯ ವಿವಿಧ ಸ್ಥಳಗಳಿಗೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಮಾತನಾಡಿದ ಅವರು, ಜಾಲಹಳ್ಳಿ ಕ್ರಾಸ್‍ನಲ್ಲಿ ಉಂಟಾಗುತ್ತಿರುವ ವಾಹನ ದಟ್ಟಣೆಯನ್ನು ನಿವಾರಿಸುವ ಉದ್ದೇಶದಿಂದ ಕೆಳಸೇತುವೆ ನಿರ್ಮಿಸಲಾಗುತ್ತಿದ್ದು, ಕಾಮಗಾರಿಯನ್ನು ತ್ವರಿತವಾಗಿ ಪ್ರಾರಂಭಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಜಾಲಹಳ್ಳಿ ಕ್ರಾಸ್‍ನಲ್ಲಿ ಕೆಳಸೇತುವೆ ನಿರ್ಮಾಣಕ್ಕಾಗಿ ಒಟ್ಟು 48 ಆಸ್ತಿಗಳನ್ನು ಭೂಸ್ವಾಧೀನಪಡಿಸಿಕೊಳ್ಳಬೇಕಿದೆ. ಈ ಪೈಕಿ ಈಗಾಗಲೇ 22 ಆಸ್ತಿಗಳನ್ನು ಭೂಸ್ವಾಧೀನಪಡಿಸಿಕೊಂಡು ಪಾಲಿಕೆಯ ವಶಕ್ಕೆ ಪಡೆಯಲಾಗಿದೆ. ಉಳಿದ 26 ಆಸ್ತಿಗಳನ್ನು ಕೂಡಲೇ ಭೂಸ್ವಾಧೀನಪಡಿಸಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯ ಆಯುಕ್ತರು ಸೂಚನೆ ನೀಡಿದರು.

ಕೆಳಸೇತುವೆ ಕಾಮಗಾರಿಗಾಗಿ ಈಗಾಗಲೇ ಭೂಸ್ವಾಧೀನಪಡಿಸಿಕೊಂಡಿರುವ ಜಾಗದಲ್ಲಿ ಸರ್ವೀಸ್ ರಸ್ತೆ ನಿರ್ಮಿಸಿ, ಆ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಬಳಿಕ ಕೆಳಸೇತುವೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯ ಆಯುಕ್ತರು ನಿರ್ದೇಶನ ನೀಡಿದರು.

ಎನ್.ಟಿ.ಟಿ.ಎಫ್‍ನಿಂದ ಸೊನಾಲ್ ಗಾರ್ಮೆಂಟ್ ಮಾರ್ಗವಾಗಿ ಟಿವಿಎಸ್ ಕ್ರಾಸ್ ಜಂಕ್ಷನ್‍ವರೆಗೆ 2.5 ಕಿ.ಮೀ. ಉದ್ದದ ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಈ ಪೈಕಿ ಜಲಮಂಡಳಿಯಿಂದ ಕೈಗೊಳ್ಳಲಾಗುತ್ತಿರುವ ಪೈಪ್‍ಲೈನ್ ಕಾಮಗಾರಿ ಪ್ರಗತಿಯಲ್ಲಿದ್ದು, ಅದರ ಮೇಲ್ವಿಚಾರಣೆ ನಡೆಸಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಮುಖ್ಯ ಆಯುಕ್ತರು ಸೂಚಿಸಿದರು.

ಪೈಪ್‍ಲೈನ್ ಕಾಮಗಾರಿ ಪೂರ್ಣಗೊಂಡ ಬಳಿಕ ರಸ್ತೆಯ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟು, ಮತ್ತೊಂದು ಭಾಗದಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಿ ವೈಟ್ ಟಾಪಿಂಗ್ ಕಾಮಗಾರಿಯನ್ನು ಕೈಗೆತ್ತಿಕೊಳ್ಳಬೇಕು. ಕಾಮಗಾರಿಯನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಮುಖ್ಯ ಆಯುಕ್ತರು ನಿರ್ದೇಶನ ನೀಡಿದರು.

ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ರಸ್ತೆ ಬದಿಯಲ್ಲಿ ತ್ಯಾಜ್ಯ ಸುರಿದಿರುವುದನ್ನು ಗಮನಿಸಿದ ಮುಖ್ಯ ಆಯುಕ್ತರು, ರಸ್ತೆ ಬದಿಯಲ್ಲಿ ಬಿಸಾಡಿರುವ ತ್ಯಾಜ್ಯವನ್ನು ಸಂಪೂರ್ಣವಾಗಿ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅಲ್ಲದೆ, ಮುಂದಿನ ದಿನಗಳಲ್ಲಿ ಅದೇ ಸ್ಥಳದಲ್ಲಿ ಮತ್ತೆ ತ್ಯಾಜ್ಯ ಸುರಿಯದಂತೆ ಅಗತ್ಯ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಿದರು.

ಕಂಠೀರವ ಸ್ಟುಡಿಯೋ ರಸ್ತೆಯಲ್ಲಿ ಗುಂಡಿಗಳು ಬಿದ್ದಿರುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಮುಖ್ಯ ಆಯುಕ್ತರು, ರಸ್ತೆಯಲ್ಲಿರುವ ಗುಂಡಿಗಳನ್ನು ತ್ವರಿತವಾಗಿ ಮುಚ್ಚುವಂತೆ ಅಧಿಕಾರಿಗಳಿಗೆ ಮುಖ್ಯ ಆಯುಕ್ತರು ಸೂಚನೆ ನೀಡಿದರು.

ಇದೇ ವೇಳೆ ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ಆಯುಕ್ತ ಡಾ.ರಾಜೇಂದ್ರ ಕೆ.ವಿ., ಮುಖ್ಯ ಇಂಜಿನಿಯರ್‍ಗಳಾದ ಸ್ವಯಂಪ್ರಭಾ, ಸಂಜೀವ್ ರಾಜು, ಕಾರ್ಯಪಾಲಕ ಇಂಜಿನಿಯರ್, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor