ಬೆಂಗಳೂರು | ಮಾಲ್‍ನ 3ನೇ ಮಹಡಿಯಿಂದ ಕೆಳಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ
ಸಾಂದರ್ಭಿಕ ಚಿತ್ರ
ಬೆಂಗಳೂರು : ಇಲ್ಲಿನ ಮಾಗಡಿ ರಸ್ತೆಯಲ್ಲಿರುವ ಜಿ.ಟಿ. ಮಾಲ್‍ನ ಮೂರನೇ ಮಹಡಿಯಿಂದ ಕೆಳಗೆ ಜಿಗಿದು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ.
ಸಾಗರ್(35) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಈತ ಕೆಎಚ್‍ಬಿ ಕಾಲೋನಿಯ ಪಾಪಯ್ಯ ಗಾರ್ಡನ್‍ನಲ್ಲಿ ವಾಸವಾಗಿದ್ದ. ಅ.20ರ ಬೆಳಗ್ಗೆ 9.30ರ ಸುಮಾರಿಗೆ ಜಿ.ಟಿ. ಮಾಲ್‍ಗೆ ಬಂದ ಸಾಗರ್, ಮೂರನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಕೆ.ಪಿ.ಅಗ್ರಹಾರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ.
ಸಾಗರ್ ನಗರದ ಖಾಸಗಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದಿ ಅನುತ್ತೀರ್ಣಗೊಂಡಿದ್ದರು. ಇದರಿಂದ ಎಲ್ಲಿಯೂ ಕೆಲಸಕ್ಕೆ ಹೋಗುತ್ತಿರಲಿಲ್ಲ. ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಸಾಗರ್, 10 ವರ್ಷಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸದ್ಯ ಕೆ.ಪಿ.ಅಗ್ರಹಾರ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.