‘ಕಸಾಪ ಅಧ್ಯಕ್ಷರ ವಿರುದ್ಧದ ದೂರುಗಳ ಬಗ್ಗೆ ತುರ್ತು ಕ್ರಮಕೈಗೊಳ್ಳಿ’ : ನ್ಯಾ.ವಿ.ಗೋಪಾಲಗೌಡ
ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್‌ನ ಸಾಂವಿಧಾನಿಕ ಮತ್ತು ನೈತಿಕತೆಯನ್ನು ಕಾಪಾಡಲು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರ ಆಡಳಿತಾತ್ಮಕ ನಡೆಯ ಬಗ್ಗೆ ಕೇಳಿ ಬಂದಿರುವ ದೂರುಗಳಿಗೆ ಸಂಬಂಧಿಸಿದಂತೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಸುಪ್ರೀಂ ಕೋರ್ಟ್‌ನ ವಿಶ್ರಾಂತ ನ್ಯಾಯಮೂರ್ತಿ ವಿ.ಗೋಪಾಲಗೌಡ ಆಗ್ರಹಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಪ್ರಜಾಸತ್ತಾತ್ಮಕವಾಗಿ ಆಡಳಿತ ನಡೆಸದಿರುವ, ಪರಿಷತ್‌ನ ಸ್ವಾಯತ್ತತೆ ಮತ್ತು ಉದ್ದೇಶಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ಬಗ್ಗೆ ಕರ್ನಾಟಕ ನಾಡು-ನುಡಿ ಜಾಗೃತಿ ಸಮಿತಿ ಧ್ವನಿ ಎತ್ತಿದ್ದು, ಅದಕ್ಕೆ ನನ್ನ ಬೆಂಬಲವಿದೆ ಎಂದು ಪತ್ರದಲ್ಲಿ ಹೇಳಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ಕೈಗೊಳ್ಳಲಾದ ಪ್ರಮುಖ ಆಡಳಿತಾತ್ಮಕ ಮತ್ತು ಆರ್ಥಿಕ ನಿರ್ಧಾರಗಳ ಮರು ಪರಿಶೀಲನೆಗೆ ಸ್ವತಂತ್ರ ಮೇಲ್ವಿಚಾರಣಾ ಸಮಿತಿ ರಚಿಸಬೇಕು. ಈ ವಿಚಾರಣೆ ಪೂರ್ಣಗೊಳ್ಳುವವರೆಗೆ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷರ ಪರಮಾಧಿಕಾರಕ್ಕೆ ತಾತ್ಕಾಲಿಕ ನಿರ್ಬಂಧ ಹೇರಬೇಕು. ಮಧ್ಯಂತರ ಆಡಳಿತಾಧಿಕಾರಿಯನ್ನು ನೇಮಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಕರ್ನಾಟಕ ನಾಡು-ನುಡಿ ಜಾಗೃತಿ ಸಮಿತಿ ಸರಕಾರದ ಮುಂದಿಟ್ಟಿದೆ. ಈ ಬೇಡಿಕೆಗಳ ಬಗ್ಗೆ ಸರಕಾರ ಹೆಚ್ಚಿನ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.