ಟಿಕೆಟ್ ರಹಿತ ಪ್ರಯಾಣ | ಮೇ ತಿಂಗಳಿನಲ್ಲಿ ಕೆಎಸ್ಸಾರ್ಟಿಸಿಯಿಂದ 6.54 ಲಕ್ಷ ರೂ. ದಂಡ ವಸೂಲಿ
Update: 2024-06-20 22:22 IST
ಸಾಂದರ್ಭಿಕ ಚಿತ್ರ
ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ) ಮೇ ತಿಂಗಳಿನಲ್ಲಿ ತನ್ನ ತನಿಖಾ ತಂಡಗಳಿಂದ ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿ ಟಿಕೆಟ್ ರಹಿತ ಪ್ರಯಾಣಿಕರಿಂದ ಒಟ್ಟು 6,54,738 ರೂ.ಗಳನ್ನು ದಂಡದ ರೂಪದಲ್ಲಿ ವಸೂಲಿ ಮಾಡಿದೆ.
ಮೇ ತಿಂಗಳಿನಲ್ಲಿ ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 42,680 ವಾಹನಗಳನ್ನು ತನಿಖೆಗೊಳಪಡಿಸಿ ಟಿಕೆಟ್ ರಹಿತ ಪ್ರಯಾಣ ಮಾಡುತ್ತಿದ್ದ 3,708 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ 88,429 ರೂ.ಗಳನ್ನು ತನಿಖಾಧಿಕಾರಿಗಳು ಪತ್ತೆ ಮಾಡಿದ್ದಾರೆ.
ತಪ್ಪಿತಸ್ಥರ ವಿರುದ್ದ ಇಲಾಖಾ ರೀತ್ಯಾ ಸೂಕ್ತ ಶಿಸ್ತಿನ ಕ್ರಮವನ್ನು ಜರುಗಿಸಲಾಗಿದೆ. ಆದುದರಿಂದ ಸಾರ್ವಜನಿಕ ಪ್ರಯಾಣಿಕರು, ಬಸ್ಸಿನಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೆಟ್ ಅಥವಾ ಪಾಸ್ ಪಡೆದು ಸಾರಿಗೆ ಬಸ್‍ಗಳಲ್ಲಿ ಪ್ರಯಾಣ ಮಾಡಬೇಕು ಎಂದು ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.