ಬೆಂಗಳೂರಿನಲ್ಲಿ ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣ: ನಾಲ್ವರ ಬಂಧನ, 60 ಬೈಕ್ ವಶಕ್ಕೆ
ಸಾಂದರ್ಭಿಕ ಚಿತ್ರ | PC : gemini AI
ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ನಿರಂತರವಾಗಿ ನಡೆಯುತ್ತಿದ್ದ ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿದ್ದ ಕೆ.ಆರ್.ಪುರ ಠಾಣೆಯ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ 60 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರಕರಣದಲ್ಲಿ ರಂಜಿತ್, ಯುವರಾಜ್, ವಿನೋದ್ ಹಾಗೂ ಮಣಿಕಂಠ ಎಂಬುವರು ಬಂಧಿತರು ಎಂದು ಗುರುತಿಸಲಾಗಿದೆ. ಈ ಆರೋಪಿಗಳಿಂದ ಬರೋಬ್ಬರಿ 60 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದ್ದು, ಅವುಗಳ ಒಟ್ಟು ಮೌಲ್ಯ ಸುಮಾರು 50 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ಬಂಧಿತ ಆರೋಪಿಗಳು ಕಳ್ಳತನಕ್ಕೆ ವಿಶೇಷ ತಂತ್ರಗಳನ್ನು ಬಳಸುತ್ತಿದ್ದರು. ನಕಲಿ ಕೀಲಿಗಳನ್ನು ಉಪಯೋಗಿಸಿ ಅಥವಾ ಹ್ಯಾಂಡಲ್ ಲಾಕ್ ಮುರಿದು ಕೆಲವೇ ನಿಮಿಷಗಳಲ್ಲಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದರು. ದಿನಕ್ಕೆ ಸರಾಸರಿ ನಾಲ್ಕು ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದುದಾಗಿ ವಿಚಾರಣೆ ವೇಳೆ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ವಿವರಿಸಿದ್ದಾರೆ.
ಸಿಸಿಟಿವಿ ಆಧಾರಿಸಿ ಬಂಧನ: ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದ ಹಿನ್ನೆಲೆ, ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಲಾಯಿತು. ಬೆಂಗಳೂರಿನಲ್ಲಿ ಕಳ್ಳತನ ಮಾಡಿದ್ದ ದ್ವಿಚಕ್ರ ವಾಹನಗಳನ್ನು ತಮಿಳುನಾಡಿನ ಜೋಲಾರಪೇಟೆ ಹಾಗೂ ತಿರುಪತ್ತೂರು ಪ್ರದೇಶಗಳಿಗೆ ಸಾಗಿಸಿ ಮಾರಾಟ ಮಾಡುತ್ತಿದ್ದದು ತನಿಖೆಯಲ್ಲಿ ಬಹಿರಂಗವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.