ಹುಲಿಗಳ ಅಸಹಜ ಸಾವು ಪ್ರಕರಣ | ತನಿಖಾ ವರದಿ ಬಳಿಕ ಕ್ರಮ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಐದು ಹುಲಿಗಳು ಅಸಹಜವಾಗಿ ಸಾವನ್ನಪ್ಪಿರುವ ಬಗ್ಗೆ ತನಿಖೆ ಕೈಗೊಳ್ಳಲು ಆದೇಶಿಸಲಾಗಿದೆ. ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.
ಪಕ್ಷದಲ್ಲಿ ಆಂತರಿಕ ಜಗಳವಿಲ್ಲ: ಸಿದ್ದರಾಮಯ್ಯ
‘ರಾಜ್ಯ ರಾಜಕೀಯದಲ್ಲಿ ಸೆಪ್ಟೆಂಬರ್ ನಂತರ ಕ್ರಾಂತಿ ಆಗಲಿದೆ' ಎಂದಿರುವ ಸಹಕಾರ ಸಚಿವ ಕೆ.ಎನ್.ರಾಜಣ್ಣರ ಹೇಳಿಕೆಯ ಬಗ್ಗೆ ಮಾಧ್ಯಮದವರು ಗಮನಸೆಳೆದಾಗ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ಸಚಿವ ಕೆ.ಎನ್.ರಾಜಣ್ಣ ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಯಾಗಬಹುದು ಎಂದು ಹೇಳಿದ್ದಾರೆ. ಇಂಥದ್ದೇ ಆಗುತ್ತದೆ ಎಂದು ಹೇಳಿಲ್ಲ. ಆ ಬಗ್ಗೆ ಮಾಧ್ಯಮದವರು ಊಹೆ ಮಾಡಿ ಬರೆದರೆ ಏನ್ಮಾಡೋಕೆ ಆಗುತ್ತದೆ ಎಂದು ಪ್ರಶ್ನಿಸಿದರು.
ಸಚಿವ ರಾಜಣ್ಣರ ಹೇಳಿಕೆಯನ್ನು ಹೇಗೆ ಅರ್ಥೈಸಿಕೊಳ್ಳಬೇಕೆಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ಅದನ್ನು ನಿರ್ಲಕ್ಷಿಸುವುದು ಒಳ್ಳೆಯದು ಎಂದು ಹೇಳಿ ನಿರ್ಗಮಿಸಿದರು.