ರಾಹುಲ್ ಗಾಂಧಿ ಹೇಳಿಕೆ ಖಂಡಿಸಿ ಆ.5ರಂದು ಗಾಂಧಿ ಪ್ರತಿಮೆ ಬಳಿ ಬಿಜೆಪಿಯಿಂದ ಪ್ರತಿಭಟನೆ : ವಿಜಯೇಂದ್ರ
ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಚುನಾವಣಾ ಅಕ್ರಮದ ಹೇಳಿಕೆಯ ಮೂಲಕ ದೇಶ ಮತ್ತು ರಾಜ್ಯದ ಮತದಾರರಿಗೆ ಅವಮಾನ ಮಾಡಿದ್ದಾರೆ. ಅವರ ಹೇಳಿಕೆ ಮತ್ತು ಸಂವಿಧಾನ ವಿರೋಧಿ ನಡೆಯನ್ನು ಖಂಡಿಸಿ ಬಿಜೆಪಿ ವತಿಯಿಂದ ಆ.5ರಂದು ಬೆಳಗ್ಗೆ 10 ಗಂಟೆಗೆ ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಶನಿವಾರ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರತಿಭಟನೆಯ ಬಳಿಕ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ನೀಡಲಿದ್ದೇವೆ. ರಾಹುಲ್ ಗಾಂಧಿ ಆ.5ರಂದು ಬೆಂಗಳೂರಿನಲ್ಲಿ ನಾಟಕ ಮಾಡಲು ಹೊರಟಿದ್ದಾರೆ ಎಂದು ಟೀಕಿಸಿದರು.
ಪಕ್ಷದ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಸಂಸದರು, ಮಾಜಿ ಶಾಸಕರು, ವಿಧಾನಪರಿಷತ್ ಮಾಜಿ ಸದಸ್ಯರು ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ರಾಹುಲ್ ಗಾಂಧಿ ಬರುತ್ತಾರೆಂಬ ಕಾರಣಕ್ಕೆ ರಾಜ್ಯ ಸರಕಾರವು ನಿನ್ನೆ ಫ್ರೀಡಂ ಪಾರ್ಕಿನಲ್ಲಿ ಕಾಂಪೌಂಡನ್ನು ಒಡೆದು ಹಾಕಿ ಅಲ್ಲಿದ್ದ ಮರವನ್ನೂ ಕಡಿದು ಹಾಕಿಸಿದೆ. ಇದಕ್ಕಾಗಿ ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ವಿಜಯೇಂದ್ರ ಒತ್ತಾಯಿಸಿದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ಒಳಗೊಂಡಂತೆ ಬೇರೆ ಬೇರೆ ರಾಜ್ಯಗಳಲ್ಲಿ ಚುನಾವಣೆಗಳಲ್ಲಿ ಅಕ್ರಮ ನಡೆದಿದೆ. ಬಿಜೆಪಿ, ಚುನಾವಣಾ ಆಯೋಗದ ದುರ್ಬಳಕೆಯನ್ನು ಮಾಡಿಕೊಂಡಿದೆ ಎಂಬ ಆರೋಪವನ್ನು ರಾಹುಲ್ ಗಾಂಧಿ ಮಾಡುತ್ತಿದ್ದಾರೆ. ಅವರು ಸೋಲಿನ ಅವಮಾನ ಮತ್ತು ಹತಾಶರಾಗಿ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಇಂತಹ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ವಿಜಯೇಂದ್ರ ದೂರಿದರು.
ಚುನಾವಣೆಗಳಲ್ಲಿ ಅಕ್ರಮ ನಡೆದಿರುವುದಕ್ಕೆ ನನ್ನ ಬಳಿ 100 ಪ್ರತಿಶತ ಪುರಾವೆ ಇದೆ ಎಂದು ರಾಹುಲ್ ಗಾಂಧಿ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಗೆ ಧ್ವನಿಗೂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಆ ಮಾಹಿತಿ ಅಥವಾ ಪುರಾವೆಗಳನ್ನು ಹೈಕೋರ್ಟಿಗೆ ಅಥವಾ ಸುಪ್ರೀಂ ಕೋರ್ಟಿಗೆ ನೀಡಿ ಪ್ರಶ್ನಿಸಬಹುದಾಗಿತ್ತು ಎಂದು ಅವರು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ, ಶಾಸಕ ಡಾ.ಸಿ.ಎನ್. ಅಶ್ವಥನಾರಾಯಣ್, ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್, ಸಂಸದ ಪಿ.ಸಿ.ಮೋಹನ್ ಮತ್ತು ವಿಧಾನಪರಿಷತ್ ಮಾಜಿ ಸದಸ್ಯ ವೈ.ಎ.ನಾರಾಯಣಸ್ವಾಮಿ ಉಪಸ್ಥಿತರಿದ್ದರು.