ಬೆಂಗಳೂರು : ಕಾಂಗ್ರೆಸ್‍ನವರು ದಲಿತರನ್ನು ಕೇವಲ ಮತ ಬ್ಯಾಂಕ್ ಆಗಿ ಮಾಡಿಕೊಂಡು ಅವರ ಶೋಷಣೆ ಮಾಡುತ್ತಾ ಬಂದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.

ಗುರುವಾರ ನಗರದ ಅರಮನೆ ರಸ್ತೆಯಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಭಾಂಗಣದ ಕೊಂಡಜ್ಜಿ ಬಸಪ್ಪ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ‘ಸಂವಿಧಾನ ಗೌರದ ದಿನ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದಲಿತರ ಬಗ್ಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ಮುಖಂಡರು ಮೊಸಳೆ ಕಣ್ಣೀರು ಹಾಕುತ್ತಾರೆ. ಮೂರುವರೆ ವರ್ಷದಲ್ಲಿ ದಲಿತರ ಕಲ್ಯಾಣಕ್ಕೆ ಮೀಸಲಿದ್ದ ಐವತ್ತು ಸಾವಿರ ಕೋಟಿ ರೂ. ಎಸ್‍ಸಿಪಿ/ ಟಿಎಸ್‍ಪಿ ಹಣವನ್ನು ಬೇರೆ ಉದ್ದೇಶಕ್ಕೆ ಕಾಂಗ್ರೆಸ್ ಸರಕಾರ ಬಳಸಿದ್ದು ಅಕ್ಷಮ್ಯ ಅಪರಾಧ. ಅಂಬೇಡ್ಕರ್ ಹಾಗೂ ಸಂವಿಧಾನದ ಬಗ್ಗೆ ಇವರಿಗೆ ಮಾತನಾಡುವ ನೈತಿಕತೆಯೇ ಇಲ್ಲ ಎಂದು ವಿಜಯೇಂದ್ರ ಕಿಡಿಗಾರಿದರು.

ವಿ.ಪಿ.ಸಿಂಗ್ ಪ್ರಧಾನಿಯಾಗಿದ್ದಾಗ ಅಟಲ್ ಬಿಹಾರಿ ವಾಜಪೇಯಿ ಅವರ ಒತ್ತಾಯದಿಂದ ಅಂಬೇಡ್ಕರ್ ಅವರಿಗೆ ಭಾರತ ರತ್ನ ನೀಡಲಾಯಿತು. ಕಾಂಗ್ರೆಸ್‍ನ ಐತಿಹಾಸಿಕ ತಪ್ಪುಗಳ ಬಗ್ಗೆ ನಾವು ಚರ್ಚೆ ಮಾಡಬೇಕಿದೆ. ಜನರಿಗೆ ಮನವರಿಕೆ ಮಾಡಬೇಕಾಗಿದೆ. ಅಂಬೇಡ್ಕರ್ ಅವರ ಚಿಂತನೆಗಳನ್ನು ನಾವು ತಿಳಿಯಬೇಕಾಗಿದೆ ಎಂದು ಅವರು ಹೇಳಿದರು.

ಸಂವಿಧಾನ ದಿನ ಯಾವುದೇ ಒಂದು ಸಮಾಜಕ್ಕೆ ಸೀಮಿತ ಆಚರಣೆ ಅಲ್ಲ. ದೇಶದ ಪ್ರತಿಯೊಬ್ಬ ಭಾರತೀಯರು ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುವ ಶುಭ ದಿನ. ಬಸವಣ್ಣನವರ ಸಮ ಸಮಾಜದ ಕನಸನ್ನು ನನಸು ಮಾಡಲು ಅಂಬೇಡ್ಕರ್ ಅವರು ಮೊದಲ ಹೆಜ್ಜೆ ಇಟ್ಟಿದ್ದರು ಎಂದು ವಿಜಯೇಂದ್ರ ತಿಳಿಸಿದರು.

ರಾಜ್ಯದಲ್ಲಿ ಬಿಜೆಪಿ ಸರಕಾರವಿದ್ದಾಗ ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೀಸಲಾತಿ ಹೆಚ್ಚಿಸುವ ದಿಟ್ಟ ನಿರ್ಧಾರ ಕೈಗೊಂಡಿದ್ದರು. ಆದರೆ ಕಾಂಗ್ರೆಸ್‍ನವರು ಹೈಕೋರ್ಟ್‍ನಲ್ಲಿ ಸರಿಯಾದ ವಾದ ಮಂಡನೆ ಮಾಡದೇ ಕಾಲಹರಣ ಮಾಡಿ ಈಗ ಬಿಜೆಪಿ ಮೇಲೆಯೆ ಆರೋಪ ಮಾಡುತ್ತಿದ್ದಾರೆ ಎಂದು ಅವರು ದೂರಿದರು.

ಕಾರ್ಯಕ್ರಮದಲ್ಲಿ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಪ್ಲಬ್ ಕುಮಾರ್ ದೇಬ್, ಸಂಸದ ಜಗದೀಶ್ ಶೆಟ್ಟರ್ ಸೇರಿದಂತೆ ಇನ್ನಿತರ ಮುಖಂಡರು ಉಪಸ್ಥಿರಿದ್ದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಅಮ್ಜದ್ ಖಾನ್ ಎಂ./ವಾರ್ತಾಭಾರತಿ

ಬೆಂಗಳೂರು ವರದಿಗಾರರು

ಅಮ್ಜದ್ ಖಾನ್ ಎಂ. ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದು, 2007ರಿಂದ ವಾರ್ತಾಭಾರತಿ ಕನ್ನಡ ದೈನಿಕ ಬೆಂಗಳೂರು ಆವೃತ್ತಿಯಲ್ಲಿ ಹಿರಿಯ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಪ್ರವಾಸಿ ಅನುಭವದ ವಿಶೇಷ ಲೇಖನಗಳನ್ನು ಬರೆಯುವುದು, ಪುಸ್ತಕ ಓದುವುದು‌, ಸಾಮಾಜಿಕ ಸೇವಾ ಕಾರ್ಯಗಳು ಇವರ ಹವ್ಯಾಸವಾಗಿವೆ.