ಮತಗಳ್ಳತನ ಆರೋಪ: ರಾಹುಲ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಗೆ ಕ್ಷಣಗಣನೆ
ರಾಹುಲ್ ಗಾಂಧಿ (Photo: PTI)
ಬೆಂಗಳೂರು: ಕಳೆದ ‘ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ’ ಎಂದು ಗಂಭೀರ ಆರೋಪ ಮಾಡಿರುವ ಲೋಕಸಭಾ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಈ ಬಗ್ಗೆ ಪಕ್ಷದ ವತಿಯಿಂದ ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ಪ್ರತಿಭಟನೆಗೆ ಕ್ಷಣಗಣನೆ ಆರಂಭವಾಗಿದೆ.
ರಾಹುಲ್ ಗಾಂಧಿ ನೇತೃತ್ವದಲ್ಲಿ ನಗರದ ಫ್ರೀಡಂ ಪಾರ್ಕ್ ನಲ್ಲಿ ಪೂರ್ವಾಹ್ನ 11 ಗಂಟೆಗೆ ಪ್ರತಿಭಟನೆ ನಡೆಯಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವರು, ಕಾಂಗ್ರೆಸ್ ಪಕ್ಷದ ಶಾಸಕರು, ಸಂಸದರು ಮತ್ತಿತರರು ಭಾಗವಹಿಸಲಿದ್ದಾರೆ.
ಪ್ರತಿಭಟನೆ ಹಿನ್ನೆಲೆಯಲ್ಲಿ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ವೇದಿಕೆ ಸಜ್ಜುಗೊಂಡಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಪದಾಧಿಕಾರಿಗಳು ಆಗಮಿಸುವ ನಿರೀಕ್ಷೆ ಇದೆ. ನಗರದ ಹೃದಯಭಾಗವೇ ಆಗಿರುವ ಶೇಷಾದ್ರಿ ರಸ್ತೆಯಲ್ಲೇ ಈ ಹೋರಾಟ ನಡೆಯಲಿದ್ದು, ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ
ಸಂಚಾರ ಪೊಲೀಸರು ಈಗಾಗಲೇ ಸುಗಮ ಸಂಚಾರಕ್ಕೆ ಕೆಲ ಮಾರ್ಪಾಡು ಮಾಡಿದ್ದಾರೆ.
ಅಲ್ಲದೆ, ಭದ್ರತೆಗೆ 12 ಮಂದಿ ಡಿಸಿಪಿ, 45 ಎಸಿಪಿ, 128 ಮಂದಿ ಇನ್ ಸ್ಪೆಕ್ಟರ್ ಗಳು, 421 ಪಿಎಸ್ಸೈಗಳು, ಕೆಎಸ್ ಆರ್ ಪಿ ತುಕಡಿಗಳು ಸೇರಿದಂತೆ ಒಟ್ಟು 4 ಸಾವಿರಕ್ಕೂ ಅಧಿಕ
ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.