×
Ad

ನೆಲಮಂಗಲದಲ್ಲಿ ಭೀಕರ ರಸ್ತೆ ಅಪಘಾತ: ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಆರು ಮಂದಿ ಸಾವು

Update: 2024-12-21 13:32 IST

ಬೆಂಗಳೂರು: ಎದುರಿನ ರಸ್ತೆಯಲ್ಲಿ ಬರುತ್ತಿದ್ದ ಕಂಟೇನರ್ ವಾಹನವು ರಸ್ತೆ ವಿಭಜಕಕ್ಕೆ ಢಿಕ್ಕಿಯಾಗಿ ಪಕ್ಕದ ರಸ್ತೆಯಲ್ಲಿ ಚಲಿಸುತ್ತಿದ್ದ ವೋಲ್ವೋ ಕಾರಿನ ಮೇಲೆ ಉರುಳಿಬಿದ್ದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಮಕ್ಕಳು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ ಭೀಕರ ರಸ್ತೆ ಅಪಘಾತ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟಿ.ಬೇಗೂರು ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಶನಿವಾರ ಸಂಭವಿಸಿದೆ.

ಮೃತರನ್ನು ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ಮೊರಬಗಿ ಗ್ರಾಮ ಮೂಲದ ಉದ್ಯಮಿ ಚಂದ್ರಶೇಖರ್ ಏಗಪ್ಪಗೋಳ್ (48), ಪತ್ನಿ ಗೌರಬಾಯಿ(35) ಹಾಗೂ ಪುತ್ರ ಜಾನ್(16), ಪುತ್ರಿ ದೀಕ್ಷಾ(12), ಚಂದ್ರಶೇಖರ್ ಸಹೋದರನ ಪತ್ನಿ ವಿಜಯಲಕ್ಷ್ಮಿ(32) ಹಾಗೂ ಆಕೆಯ ಪುತ್ರ ಆರ್ಯ(6) ಗುರುತಿಸಲಾಗಿದೆ.

ಚಂದ್ರಶೇಖರ ಏಗಪ್ಪಗೋಳ ಕುಟುಂಬ ಬೆಂಗಳೂರಿನ ಎಚ್‍ಎಸ್‍ಆರ್ ಲೇಔಟ್‍ನಲ್ಲಿ ವಾಸವಿದ್ದು, ಐಎಎಸ್‍ಟಿ ಸಾಫ್ಟ್ ವೇರ್ ಕಂಪೆನಿ ಮಾಲಕರಾಗಿದ್ದರು. ತಂದೆಯ ಅನಾರೋಗ್ಯದ ಹಿನ್ನೆಲೆಯಲ್ಲಿ ನೋಡಲು ಕುಟುಂಬ ಸಮೇತ ವಿಜಯಪುರ ಜಿಲ್ಲೆ ಗಡಿಗೆ ಹೊಂದಿಕೊಂಡಿರುವ ಮಹಾರಾಷ್ಟ್ರ ರಾಜ್ಯಕ್ಕೆ ಕಾರಿನಲ್ಲಿ ತೆರಳುತ್ತಿದ್ದರು ಎಂದು ಮೂಲಗಳು ತಿಳಿಸಿವೆ.

ಶನಿವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅಪಘಾತದ ಹಿನ್ನೆಲೆಯಲ್ಲಿ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಸುಮಾರು 10 ಕಿಲೋ ಮೀಟರ್ ರಸ್ತೆಯ ಎರಡೂ ಕಡೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ಕಂಟೇನರ್ ಬಿದ್ದ ರಭಸಕ್ಕೆ ವೋಲ್ವೋ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಅದರಲ್ಲಿದ್ದ ಮೃತದೇಹಗಳು ಛಿದ್ರವಾಗಿವೆ ಎನ್ನಲಾಗಿದೆ.

ಬೆಂಗಳೂರಿನಿಂದ ತುಮಕೂರು ಮಾರ್ಗವಾಗಿ ತೆರಳುತ್ತಿದ್ದ ಕಾರಿನ ಮೇಲೆ ಎದುರಿನಿಂದ ಬಂದ ಕಂಟೈನರ್ ಇನ್ನೊಂದು ವಾಹನಕ್ಕೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದ ಪರಿಣಾಮ ಪಕ್ಕದ ರಸ್ತೆಯಲ್ಲಿ ಬರುತ್ತಿದ್ದ ವೋಲ್ವೋ ಕಾರಿನ ಮೇಲೆ ಪಲ್ಟಿಯಾಗಿದೆ.

ಇದರ ಪರಿಣಾಮ ಕಾರಲ್ಲಿದ್ದ ಮೂವರು ಮಕ್ಕಳು ಸೇರಿದಂತೆ ಆರು ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಕ್ಷಣವೇ ಸಾರ್ವಜನಿಕರು ಅವರನ್ನು ಕಾರಿನಿಂದ ಹೊರ ತೆಗೆದು ಆಸ್ಪತ್ರೆಗೆ ಸಾಗಿಸಿದ್ದಾರೆ. ಕಂಟೇನರ್ ಚಾಲಕನಿಗೂ ತೀವ್ರ ಸ್ವರೂಪದ ಗಾಯಗಳಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

ರಾಷ್ಟ್ರೀಯ ಹೆದ್ದಾರಿ-4ರಲ್ಲಿ ರಸ್ತೆ ಅಪಘಾತ ಸಂಭವಿಸಿದ್ದರಿಂದ ಕೆಲಕಾಲ ಸಂಚಾರ ಸ್ಥಗಿತಗೊಳಿಸಿದ್ದು, ಬಳಿಕ ಎಲ್ಲವನ್ನೂ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣ ಸಂಬಂಧ ನೆಲಮಂಗಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಕೈಗೊಂಡಿದ್ದಾರೆ.

 

 

 

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News