ಬೆಳಗಾವಿ: ಆರನೇ ದಿನವೂ ಮುಂದುವರಿದ ಕಬ್ಬು ಬೆಳೆಗಾರರ ಅಹೋರಾತ್ರಿ ಧರಣಿ
► ಕಬ್ಬಿನ ದರ ಪ್ರತಿ ಟನ್‌ಗೆ ₹3500 ನಿಗದಿ ಮಾಡುವಂತೆ ಪಟ್ಟು ಹಿಡಿದ ರೈತರು
ಬೆಳಗಾವಿ: ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್ ಬಳಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಅಹೋರಾತ್ರಿ ಧರಣಿ ಆರನೇ ದಿನವೂ ಮುಂದುವರಿದಿದೆ. ಕಬ್ಬು ನುರಿಯುವ ಹಂಗಾಮು ಆರಂಭವಾದರೂ ಇನ್ನೂ ಕಬ್ಬಿನ ದರ ನಿಗದಿಯಾಗದ ಹಿನ್ನೆಲೆಯಲ್ಲಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿ ಟನ್‌ಗೆ ₹3500 ಕಬ್ಬಿನ ದರ ನಿಗದಿ ಮಾಡುವಂತೆ ರೈತರು ಪಟ್ಟು ಹಿಡಿದಿದ್ದಾರೆ.
ಈ ಕುರಿತು ಸಂಧಾನಕ್ಕೆ ಮುಂದಾದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು, ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಮಾತುಕತೆ ನಡೆಸಿ ಪ್ರತಿ ಟನ್‌ಗೆ ₹3200 ನೀಡಲು ಒಪ್ಪಿಸಿಕೊಳ್ಳಲು ಪ್ರಯತ್ನಿಸಿದರೂ, ರೈತರು ತಮ್ಮ ಬೇಡಿಕೆಯಿಂದ ಹಿಂದೆ ಸರಿಯಲಿಲ್ಲ ಎಂದು ತಿಳಿದು ಬಂದಿದೆ.
ರಾಜ್ಯ ಸರ್ಕಾರ ಹಾಗೂ ಸಕ್ಕರೆ ಕಾರ್ಖಾನೆಗಳ ಲಾಬಿ ನಡುವಿನ ಆಪ್ತ ಸಂಬಂಧದ ಕಾರಣದಿಂದಲೇ ಕಬ್ಬಿನ ದರ ಘೋಷಣೆಯಲ್ಲಿ ವಿಳಂಬವಾಯಿತೇ ಎಂದು ರೈತರು ಅನುಮಾನ ವ್ಯಕ್ತಪಡಿಸಿದ್ದಾರೆ.
ಆಕ್ರೋಶಗೊಂಡ ರೈತರು ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ಮುಂದುವರಿಸಿದ್ದು, ಬೆಳಗಾವಿ–ಬಾಗಲಕೋಟೆ–ವಿಜಯಪುರ ರಸ್ತೆ ಸಂಪರ್ಕ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಪ್ರಯಾಣಿಕರು ಪರದಾಡಬೇಕಾದ ಪರಿಸ್ಥಿತಿಯುಂಟಾಗಿದೆ. ರಾಜ್ಯ ಸರ್ಕಾರ ಮತ್ತು ಸಂಬಂಧಪಟ್ಟ ಇಲಾಖೆಯ ಸಚಿವರು ಇನ್ನೂ ಪ್ರತಿಕ್ರಿಯೆ ನೀಡದ ಹಿನ್ನೆಲೆಯಲ್ಲಿ ರೈತರು ಹೋರಾಟವನ್ನು ತೀವ್ರಗೊಳಿಸುವ ಎಚ್ಚರಿಕೆ ನೀಡಿದ್ದಾರೆ.