ಹಿಂಡಾಲ್ಕೋ ಕಂಪೆನಿಯಲ್ಲಿ ಕಾರ್ಮಿಕ ಆತ್ಮಹತ್ಯೆ
ಕಿರುಕುಳದಿಂದ ಮನನೊಂದು ಆತ್ಮಹತ್ಯೆ : ಕುಟುಂಬಸ್ಥರ ಆರೋಪ
ಬೆಳಗಾವಿ : ಬೆಳಗಾವಿ ನಗರದ ಹೊರವಲಯದಲ್ಲಿರುವ ಹಿಂಡಾಲ್ಕೋ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನೊಬ್ಬ ಕಂಪೆನಿ ಆವರಣದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಡೆದಿದ್ದು, ಘಟನೆಯ ಬಳಿಕ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಭಾರೀ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿರುವ ಬಗ್ಗೆ ವರದಿಯಾಗಿದೆ.
ಮೃತ ಕಾರ್ಮಿಕನನ್ನು ಬೆಳಗಾವಿ ತಾಲೂಕಿನ ಮುತ್ಯಾನಟ್ಟಿ ಗ್ರಾಮದ ಶಂಕರ ತಳವಾರ ಎಂದು ಗುರುತಿಸಲಾಗಿದೆ. ಆರು ವರ್ಷಗಳಿಂದ ಇಂಡಾಲ್ಕೋ ಕಂಪೆನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಂಕರ, ಉದ್ಯೋಗ ಸಂಬಂಧಿತ ಸಮಸ್ಯೆಗಳು ಹಾಗೂ ಕಿರುಕುಳದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಮತ್ತು ಗ್ರಾಮಸ್ಥರು ಆರೋಪಿಸಿದ್ದಾರೆ.
ಆತ್ಮಹತ್ಯೆಗೆ ಮುನ್ನ ಶಂಕರ ವಾಟ್ಸ್‌ಆಪ್ ಮೂಲಕ ಡೆತ್ ನೋಟ್ ಬರೆದಿದ್ದು, ಕಂಪೆನಿಯಲ್ಲಿ ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವಲ್ಲಿ ಅನ್ಯಾಯ ನಡೆಯುತ್ತಿದೆ ಎಂದು ಉಲ್ಲೇಖಿಸಿದ್ದಾರೆೆ ಎನ್ನಲಾಗಿದೆ. ಎಸೆಸೆಲ್ಸಿ ಮತ್ತು ಐಟಿಐ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಗೆ ಉದ್ಯೋಗ ನೀಡದೆ, ಹೆಚ್ಚುವರಿ ಅರ್ಹತೆಗಳನ್ನು ಕಡ್ಡಾಯಗೊಳಿಸಲಾಗುತ್ತಿದೆ ಎಂದು ಆತ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಂಪೆನಿ ಆವರಣದಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದರಿಂದ ನಾಲ್ಕು ಕೆಎಸ್‌ಆರ್‌ಪಿ ತುಕಡಿಗಳು ಸೇರಿದಂತೆ ನೂರಾರು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಡೆತ್ ನೋಟ್ ಸೇರಿದಂತೆ ವಿವಿಧ ದಾಖಲೆಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣವೇನು, ಡೆತ್ ನೋಟ್‌ನಲ್ಲಿ ಮಾಡಿರುವ ಆರೋಪಗಳ ಸತ್ಯಾಸತ್ಯತೆ ಏನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.