×
Ad

ತೊಗರಿಗೆ ಬೆಂಬಲ ಬೆಲೆ ಘೋಷಿಸಲು ಕ್ರಮ : ಎನ್.ಚಲುವರಾಯಸ್ವಾಮಿ

Update: 2024-12-09 19:19 IST

ಚಲುವರಾಯಸ್ವಾಮಿ 

ಬೆಳಗಾವಿ,(ಸುವರ್ಣ ವಿಧಾನಸೌಧ) : ಕಲಬುರಗಿ ಜಿಲ್ಲೆಯ ತೊಗರಿಗೆ ಹೆಚ್ಚಿನ ರೀತಿಯಲ್ಲಿ ಬೆಂಬಲ ಬೆಲೆ ಘೋಷಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಕಲಬುರಗಿ ಜಿಲ್ಲೆಯಲ್ಲಿ 30 ಲಕ್ಷ ರೈತರು ಬೆಳೆಯುತ್ತಿರುವ ತೊಗರಿ ಜಿ1-ಟ್ಯಾಗ್ ಕ್ಲಾಸ್-31 ಪ್ರಮಾಣ ಪತ್ರ 2017ರಿಂದ 2019ರಲ್ಲಿ ದೊರೆತಿದ್ದರೂ ಅದರ ಗುಣಧರ್ಮಕ್ಕೆ ಅನುಗುಣವಾಗಿ ವೈಜ್ಞಾನಿಕ ಬೆಂಬಲ ಬೆಲೆ ಘೋಷಿಸದಿರುವುದರಿಂದ ರೈತರಿಗೆ ನಷ್ಟ ಉಂಟಾಗುತ್ತಿದೆ ಎಂದು ಪರಿಷತ್‍ನಲ್ಲಿ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಮಂಡಿಸಿದ ಗಮನ ಸೆಳೆಯುವ ಸೂಚನೆಗೆ ಸಚಿವರು ಪ್ರತಿಕ್ರಿಯಿಸಿದರು.

ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆಯನ್ನು ಕೇಂದ್ರ ಸರಕಾರವು ಘೋಷಣೆ ಮಾಡುತ್ತದೆ. ಕೇಂದ್ರದ ಕೃಷಿ ವೆಚ್ಚ ಮತ್ತು ಬೆಲೆ ಆಯೋಗವು ಪ್ರತಿ ವರ್ಷ ಮುಂಗಾರು ಮತ್ತು ಹಿಂಗಾರು ಹಂಗಾಮಿನ ಬೆಳೆಗಳಿಗೆ ವಿವಿಧ ರಾಜ್ಯಗಳಲ್ಲಿ ಉತ್ಪಾದನಾ ವೆಚ್ಚ ವಿವರಗಳನ್ನು ಕೃಷಿ ವಿಶ್ವ ವಿದ್ಯಾನಿಲಯಗಳ ಸಹಯೋಗದಲ್ಲಿ ಲೆಕ್ಕಾಚಾರ ಮಾಡುತ್ತದೆ. ಜೊತೆಗೆ ಎಲ್ಲಾ ರಾಜ್ಯ ಸರಕಾರಗಳಿಂದ ಬೆಳೆಗಳ ಉತ್ಪಾದನಾ ವೆಚ್ಚದ ಮಾಹಿತಿ ಪಡೆದು, ತಜ್ಞರು, ಅಧಿಕಾರಿಗಳು ಮತ್ತು ರೈತರೊಂದಿಗೆ ಚರ್ಚಿಸಿ, ಉತ್ಪಾದನಾ ವೆಚ್ಚ ವಿವರಗಳನ್ನು ಒಳಗೊಂಡ ಬೆಲೆ ನೀತಿ ವರದಿಯನ್ನು ತಯಾರಿಸಲಾಗುತ್ತದೆ ಎಂದು ಚಲುವರಾಯಸ್ವಾಮಿ ಹೇಳಿದರು.

ಈ ವರದಿಯ ಶಿಫಾರಸ್ಸುಗಳಿಗೆ ಸಂಬಂಧಿಸಿದಂತೆ ರಾಜ್ಯಗಳ ಅಭಿಪ್ರಾಯ ಪಡೆದು, ನಂತರ ಉತ್ಪಾದನಾ ವೆಚ್ಚದ ಮೇಲೆ ಶೇ.50ರಷ್ಟು ಸೇರಿಸಿ ಬೆಂಬಲ ಬೆಲೆಯನ್ನು ನಿಗದಿಪಡಿಸಲು ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡುತ್ತದೆ. ಸಿಎಸಿಪಿ ಶಿಫಾರಸ್ಸಿನನ್ವಯ ಕೇಂದ್ರ ಸರಕಾರವು ಬೆಂಬಲ ಬೆಲೆಯನ್ನು ಘೋಷಿಸುತ್ತದೆ. ಈ ಸಂಬಂಧ ತೊಗರಿಗೆ ಹೆಚ್ಚಿನ ಬೆಂಬಲ ಬೆಲೆ ನಿಗದಿಪಡಿಸುವಂತೆ ಕೋರಿ ಕೇಂದ್ರ ಸರಕಾರಕ್ಕೆ ಮತ್ತೊಂದು ಪತ್ರ ಬರೆಯಲಾಗುವುದು ಎಂದು ಚಲುವರಾಯಸ್ವಾಮಿ ತಿಳಿಸಿದರು.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News