ಬೆಳಗಾವಿ : ‘ಅಭಿವೃದ್ಧಿ ವಿಷಯದಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯ ಆಗುತ್ತಲೇ ಇದೆ. ಇದನ್ನು ನೋಡಿದರೆ ಪ್ರತ್ಯೇಕ ರಾಜ್ಯದ ಕೂಗು ತಪ‍್ಪೇನೂ ಅಲ್ಲ ಅನ್ನಿಸುತ್ತಿದೆ’ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

‘ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ರಚಿಸಿ ಮುಖ್ಯಮಂತ್ರಿ ಆಗುವುದಾಗಿ ಉಮೇಶ ಕತ್ತಿ ಹೇಳುತ್ತಿದ್ದರು. ಈಗಿನ ಪರಿಸ್ಥಿತಿ ಗಮನಿಸಿದರೆ ಅವರ ಮಾತು ಸರಿ ಅನ್ನಿಸುತ್ತದೆ. ಈಗ ಅಲ್ಲದಿದ್ದರೂ 10 ವರ್ಷಗಳ ಬಳಿಕ ಪ್ರತ್ಯೇಕ ರಾಜ್ಯ ರಚನೆ ಆಗುವ ಸಾಧ್ಯತೆ ಇದೆ. ಬೆಳಗಾವಿಯನ್ನು ರಾಜಧಾನಿ ಮಾಡಲು ಆಗ ನಾವು ಬೆಂಬಲವಾಗಿ ನಿಲ್ಲುತ್ತೇವೆ’ ಎಂದು ಅವರು ತಿಳಿಸಿದರು.

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಸಹಮತವಿಲ್ಲ : ಸತೀಶ್ ಜಾರಕಿಹೊಳಿ

ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡುವ ಪ್ರಸ್ತಾಪಕ್ಕೆ ನಮ್ಮ ಸಹಮತವಿಲ್ಲ. ಆದರೆ ಆಡಳಿತಾತ್ಮಕ ಅನುಕೂಲದ ದೃಷ್ಟಿಯಿಂದ ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಪ್ರತ್ಯೇಕ ಜಿಲ್ಲೆ ರಚಿಸುವುದಕ್ಕೆ ನಮ್ಮ ಬೆಂಬಲವಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು.

ಹುಕ್ಕೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆ ವಿಭಜನೆ ಹಾಗೂ ಹೊಸ ಜಿಲ್ಲೆ ರಚನೆಯ ವಿಚಾರದಲ್ಲಿ ನಮ್ಮ ನಿಲುವು ಸ್ಪಷ್ಟವಾಗಿದೆ. ಈ ಬಗ್ಗೆ ಯಾವುದೇ ಗೊಂದಲ ಅಥವಾ ಅಪಸ್ವರ ಇಲ್ಲ. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡುವ ಕುರಿತು ನೀಡಿರುವ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯವಾಗಿದೆ. ಜಿಲ್ಲೆ ವಿಭಜನೆ ವಿಚಾರದಲ್ಲಿ ಎಲ್ಲರೂ ಒಮ್ಮತಕ್ಕೆ ಬರುವ ನಿರೀಕ್ಷೆಯಿದೆ. ಮುಂದಿನ ಬೆಳವಣಿಗೆಗಳನ್ನು ಕಾದು ನೋಡೋಣ ಎಂದು ಹೇಳಿದರು.

ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಡುವಿನ ವಾಕ್ಸಮರದ ಕುರಿತು ಪ್ರತಿಕ್ರಿಯಿಸಿದ ಸಚಿವರು, ಇಬ್ಬರ ನಡುವಿನ ಜಟಾಪಟಿ ಸಂಪೂರ್ಣ ವೈಯಕ್ತಿಕ ವಿಚಾರವಾಗಿದೆ. ಇದು ರಾಜ್ಯದ ಅಥವಾ ದೇಶದ ಸಮಸ್ಯೆಯಲ್ಲ ಎಂದು ಅಭಿಪ್ರಾಯಪಟ್ಟರು.

ಒಬ್ಬರು ಮತ್ತೊಬ್ಬರ ವಿರುದ್ಧ ಟೀಕೆ ಮಾಡಿದ್ದು, ಅದಕ್ಕೆ ಪ್ರತಿಯಾಗಿ ಮತ್ತೊಬ್ಬರು ಮಾತನಾಡಿದ್ದಾರೆ. ಇಬ್ಬರೂ ಪರಸ್ಪರ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿದ್ದಾರೆ. ಹೀಗಾಗಿ ಇಬ್ಬರ ನಡುವಿನ ಜಗಳ ಈಗ ಸಮಬಲದಲ್ಲಿದೆ ಎಂದು ವ್ಯಂಗ್ಯವಾಡಿದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor