Belagavi | ಕಬ್ಬಿನ ಗದ್ದೆಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ದಂಪತಿ ಮೃತ್ಯು
ಸಾಂದರ್ಭಿಕ ಚಿತ್ರ | PC : Gemini AI
ಬೆಳಗಾವಿ : ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರ ಗ್ರಾಮದ ಹೊರವಲಯದ ಕಬ್ಬಿನ ಗದ್ದೆಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿದ ಪರಿಣಾಮ ದಂಪತಿ ಮೃತಪಟ್ಟ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.
ಮೃತರನ್ನು ಮುತ್ತಪ್ಪ ಶ್ರೀಶೈಲ ಮುಗಳಖೋಡ (46) ಹಾಗೂ ಅವರ ಪತ್ನಿ ರಾಜೇಶ್ವರಿ ಮುಗಳಖೋಡ (36) ಎಂದು ಗುರುತಿಸಲಾಗಿದೆ.
ಕಬ್ಬಿನ ಗದ್ದೆಯಲ್ಲಿ ಕಳೆ ತೆಗೆಯುವ ಕೆಲಸದಲ್ಲಿ ನಿರತರಾಗಿದ್ದ ವೇಳೆ ಏಕಾಏಕಿ ವಿದ್ಯುತ್ ತಂತಿ ತುಂಡಾಗಿ ಬಿದ್ದ ಪರಿಣಾಮ ಇಬ್ಬರಿಗೂ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಅಪಾಯಕಾರಿ ರೀತಿಯಲ್ಲಿ ವಿದ್ಯುತ್ ತಂತಿಗಳು ನೇತಾಡುತ್ತಿದ್ದರೂ ಅವುಗಳನ್ನು ಸಮರ್ಪಕವಾಗಿ ನಿರ್ವಹಿಸದ ಕಾರಣ ಈ ದುರಂತ ಸಂಭವಿಸಿದೆ ಎಂದು ಮೃತರ ಸಂಬಂಧಿಕರು ವಿದ್ಯುತ್ ಇಲಾಖೆಯ ವಿರುದ್ಧ ಆರೋಪಿಸಿದ್ದಾರೆ. ಘಟನೆಗೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಘಟನೆಯ ಬಳಿಕ ಸ್ಥಳದಲ್ಲಿ ಮೃತರ ಕುಟುಂಬಸ್ಥರು ಹಾಗೂ ಗ್ರಾಮಸ್ಥರ ಆಕ್ರೋಶ ವ್ಯಕ್ತವಾಗಿದ್ದು, ಮೂಡಲಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.