Belagavi | ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಮೃತ್ಯು
ಸಾಂದರ್ಭಿಕ ಚಿತ್ರ | PC : Image by brgfx on Magnific
ಬೆಳಗಾವಿ : ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿದ ಪರಿಣಾಮ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳಗಾವಿಯ ಗಾಂಧಿನಗರ ಸಮೀಪದ ಪೂನಾ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮೃತ ಯುವಕನನ್ನು ಮಹಾಂತೇಶ್ ನಗರದ ನಿವಾಸಿ ಧ್ರುವ ಸಂತೋಷ ಕರ್ಜಗಿ (19) ಎಂದು ಗುರುತಿಸಲಾಗಿದೆ.
ಧ್ರುವ ಅವರು ಬೈಕ್‌ನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಮಾಂಜಾ ದಾರ ಕುತ್ತಿಗೆಗೆ ಸಿಲುಕಿದೆ ಎನ್ನಲಾಗಿದೆ. ದಾರದಿಂದ ಕುತ್ತಿಗೆಗೆ ಗಂಭೀರ ಗಾಯವಾಗಿದ್ದು, ತೀವ್ರ ರಕ್ತಸ್ರಾವದಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ಬೆಳಗಾವಿ ಉತ್ತರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆಗೆ ಸಂಬಂಧಿಸಿದಂತೆ ತನಿಖೆ ಮುಂದುವರಿಸಿದ್ದಾರೆ.