ಬೆಳಗಾವಿ : ಕಬ್ಬಿನ ಬೆಂಬಲ ಬೆಲೆ ನಿಗದಿ ವಿಚಾರವಾಗಿ ಕಬ್ಬು ಬೆಳೆಗಾರರ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಬೆಳಗಾವಿ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಕಬ್ಬಿನ ದರ ನಿಗದಿಗಾಗಿ ರೈತರು ನಡೆಸುತ್ತಿರುವ ಹೋರಾಟದ ಭಾಗವಾಗಿ ನಾಳೆ ಬೆಳಗಾವಿಯ ಹಿಂಡಲಗಾ ಜೈಲಿಗೆ ಮುತ್ತಿಗೆ ಹಾಕಿ, ಜೈಲು ಭರೋ ಚಳವಳಿ ನಡೆಸಲು ರೈತ ಮುಖಂಡರು ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿರುವ ಪೊಲೀಸ್ ಇಲಾಖೆಯು, ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸುವ ನಿರ್ಧಾರ ಕೈಗೊಂಡಿದೆ.

ಈ ಕುರಿತು ಬೆಳಗಾವಿ ನಗರ ಪೊಲೀಸ್ ಆಯುಕ್ತ ಪ್ರಕಾಶ್ ನಿಕ್ಕಂ ಮಾಹಿತಿ ನೀಡಿದ್ದು, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಕಾಯ್ದೆಯ ಕಲಂ 163ರ ಅಡಿಯಲ್ಲಿ ಈ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ನಿಷೇಧಾಜ್ಞೆ ಜಾರಿಯಲ್ಲಿರುವ ಅವಧಿಯಲ್ಲಿ ಐದಕ್ಕಿಂತ ಹೆಚ್ಚು ಜನರು ಗುಂಪುಗೂಡುವಂತಿಲ್ಲ. ಅಲ್ಲದೆ, ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವಂತಹ ಯಾವುದೇ ಚಟುವಟಿಕೆಗಳಿಗೆ ಅವಕಾಶ ನೀಡುವುದಿಲ್ಲ ಎಂದು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.

ನಾಳೆ ನಡೆಯಲಿರುವ ರೈತರ ಜೈಲು ಭರೋ ಚಳವಳಿಯ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯು ನಗರದಾದ್ಯಂತ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿದೆ. ಕಬ್ಬು ಬೆಳೆಗಾರರ ಹೋರಾಟದ ಕಾವು ಹೆಚ್ಚುತ್ತಿರುವ ಬೆನ್ನಲ್ಲೇ ಈ ನಿಷೇಧಾಜ್ಞೆ ಜಾರಿಯಾಗಿದ್ದು, ನಾಳಿನ ಚಳವಳಿ ತೀವ್ರ ಕುತೂಹಲ ಮೂಡಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor