Belagavi | ಟಿಪ್ಪರ್‌ಗೆ ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿ: ಚಾಲಕ ಮೃತ್ಯು, 12 ಪ್ರಯಾಣಿಕರಿಗೆ ಗಾಯ
ಬೆಳಗಾವಿ: ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸಮೀಪ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕೆಎಸ್‌ಆರ್‌ಟಿಸಿ ಬಸ್‌ವೊಂದು ಟಿಪ್ಪರ್‌ಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, 12 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಮೃತ ಚಾಲಕನನ್ನು ಗದಗ ಜಿಲ್ಲೆಯ ರೋಣ ತಾಲೂಕಿನ ಸವದಿ ಗ್ರಾಮದ ನಿವಾಸಿ ಸಂಗಪ್ಪ ತಳವಾರ ಎಂದು ಗುರುತಿಸಲಾಗಿದೆ.
ಗಂಗಾವತಿಯಿಂದ ಕೊಲ್ಹಾಪುರದತ್ತ ತೆರಳುತ್ತಿದ್ದ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಅಪಘಾತಕ್ಕೀಡಾಗಿದೆ ಎಂದು ತಿಳಿದು ಬಂದಿದೆ.
ಅಪಘಾತದಲ್ಲಿ ಗಾಯಗೊಂಡ 12 ಪ್ರಯಾಣಿಕರನ್ನು ತಕ್ಷಣ ಸಂಕೇಶ್ವರ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದು ಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸಂಕೇಶ್ವರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.