Belagavi | 2,598 ಮತದಾರರ ಹೆಸರು ಅಳಿಸಲು ಮನವಿ ಆರೋಪ: ಶಾಸಕ ಅಭಯ್ ಪಾಟೀಲ್ ವಿರುದ್ಧ ಕಾಂಗ್ರೆಸ್ ದೂರು
ಅಭಯ್ ಪಾಟೀಲ್
ಬೆಳಗಾವಿ : ದಕ್ಷಿಣ ಮತಕ್ಷೇತ್ರದ 2,598 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಶಾಸಕ ಅಭಯ್ ಪಾಟೀಲ್ ವಿರುದ್ಧ ಕಾಂಗ್ರೆಸ್ ನಗರ ಘಟಕ ಪೊಲೀಸ್ ಠಾಣೆ ಮೆಟ್ಟಿಲೇರಿದೆ.
ಈ ಸಂಬಂಧ ಕಾಂಗ್ರೆಸ್ ಮುಖಂಡರು ಶಾಹಾಪುರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ಶಾಸಕ ಅಭಯ್ ಪಾಟೀಲ್ ಅವರು 2,598 ಮತದಾರರನ್ನು ನಕಲಿ ಮತದಾರರೆಂದು ಗುರುತಿಸಿ, ಅವರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವಂತೆ ಮನವಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಫಾರ್ಮ್ ನಂ.7 ಅರ್ಜಿಗಳು ಹಾಗೂ ಇತರ ದಾಖಲೆಗಳನ್ನು ಆಧರಿಸಿ ಮತದಾರರ ಹೆಸರುಗಳನ್ನು ಅಳಿಸಲು ಪ್ರಯತ್ನಿಸಲಾಗಿದೆ. ಅಲ್ಲದೆ, ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಶಾಸಕರು ಹಸ್ತಕ್ಷೇಪ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
2,598 ಮತದಾರರನ್ನು ಬಾಂಗ್ಲಾದೇಶ, ಪಾಕಿಸ್ತಾನ ಹಾಗೂ ರೋಹಿಂಗ್ಯಾ ಮೂಲದವರು ಎಂದು ಆರೋಪಿಸಿ ಅವರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ಮುಂದಾಗಿರುವುದು ಗಂಭೀರ ವಿಚಾರ ಎಂದು ಕಾಂಗ್ರೆಸ್ ನಗರ ಘಟಕ ತಿಳಿಸಿದೆ. ಇಂತಹ ಕ್ರಮದಿಂದ ಸಾರ್ವಜನಿಕರಲ್ಲಿ ಗೊಂದಲ ಉಂಟಾಗುವುದರ ಜೊತೆಗೆ, ಅರ್ಹ ಮತದಾರರ ಮತದಾನದ ಹಕ್ಕಿನ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಶಾಸಕ ಅಭಯ್ ಪಾಟೀಲ್ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪತ್ರ, ಅದಕ್ಕೆ ಸಂಬಂಧಿಸಿದ ದಾಖಲೆಗಳು ಹಾಗೂ ಫಾರ್ಮ್ ನಂ.7 ಅರ್ಜಿಗಳನ್ನು ಪರಿಶೀಲಿಸಬೇಕು. ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ, ಆರೋಪಗಳು ಸಾಬೀತಾದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ನಗರ ಘಟಕ ಪೊಲೀಸರಿಗೆ ಮನವಿ ಮಾಡಿದೆ.