Belagavi | ನಿಲ್ಲಿಸಿದ್ದ ಕಾರಿಗೆ ಏಕಾಏಕಿ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ
ಬೆಳಗಾವಿ : ನಿಲ್ಲಿಸಿದ್ದ ಕಾರೊಂದಕ್ಕೆ ಏಕಾಏಕಿ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದಲ್ಲಿ ನಡೆದಿದೆ.
ಊರಿಗೆ ತೆರಳಿ ವಾಪಸ್ ಬಂದಿದ್ದ ಚಾಲಕ ಕಾರನ್ನು ನಿಲ್ಲಿಸಿ ಕೆಳಗಿಳಿದ ಕೆಲವೇ ಕ್ಷಣಗಳಲ್ಲಿ ಈ ಅವಘಡ ಸಂಭವಿಸಿದೆ. ಕಾರಿನಿಂದ ಏಕಾಏಕಿ ಹೊಗೆ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಬೆಂಕಿ ಧಗಧಗನೆ ಹೊತ್ತಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿಯ ಕೆನ್ನಾಲಿಗೆ ಇಡೀ ಕಾರನ್ನು ಆವರಿಸಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಆದರೆ, ಸಿಬ್ಬಂದಿ ಸ್ಥಳಕ್ಕೆ ಆಗಮಿಸುವಷ್ಟರಲ್ಲಿ ಕಾರು ಸಂಪೂರ್ಣ ಸುಟ್ಟುಹೋಗಿತ್ತು.
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಾರಿಗೆ ಬೆಂಕಿ ತಗುಲಲು ನಿಖರ ಕಾರಣ ತಿಳಿದುಬಂದಿಲ್ಲ. ಈ ಘಟನೆ ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.