Belagavi | ಅಮನ್ ನಗರದಲ್ಲಿ ಮೂವರ ಮೇಲೆ ತಲವಾರು ದಾಳಿ : ಆರು ಆರೋಪಿಗಳ ಬಂಧನ
ಬೆಳಗಾವಿ: ಮೂವರು ಯುವಕರ ಮೇಲೆ ತಂಡವೊಂದು ತಲವಾರು ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ನಗರದ ಅಮನ್ ನಗರದಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಅಮನ್ ನಗರ ನಿವಾಸಿಗಳಾದ ವಲಿ ಶೇಖ್, ಇಮಾಮ್ ಶೇಖ್ ಹಾಗೂ ಮಜೀದ್ ಶೇಖ್ ಗಾಯಗೊಂಡ ಯುವಕರಾಗಿದ್ದಾರೆ. ಗಾಯಾಳುಗಳನ್ನು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಳೇ ದ್ವೇಷದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದ್ದು, ಘಟನೆಗೆ ಸಂಬಂಧಿಸಿ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ತಲವಾರು ದಾಳಿಯ ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಮಾಳಮಾರುತಿ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳಿಂದ ಪ್ರಾಥಮಿಕ ಮಾಹಿತಿ ಸಂಗ್ರಹಿಸಿದ್ದಾರೆ. ಈ ಮಧ್ಯೆ ಹಲ್ಲೆ ಆರೋಪಿಗಳ ಸುಳಿವು ಪಡೆದ ಪೊಲೀಸರು, ಪರಾರಿಯಾಗಲು ಯತ್ನಿಸುತ್ತಿದ್ದ ಆರು ಮಂದಿಯನ್ನು ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಾಳಿಗೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಅಲ್ಲದೇ ಪ್ರಕರಣದಲ್ಲಿ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬುದರ ಕುರಿತು ತನಿಖೆ ಮುಂದುವರಿಸಿದ್ದಾರೆ.