×
Ad

ಬೆಳಗಾವಿ | ಗರ್ಭಿಣಿಯ ಬರ್ಬರ ಹತ್ಯೆ : ಆರೋಪಿಗಳ ಪತ್ತೆಗೆ ಪೊಲೀಸರ ಶೋಧ

Update: 2024-12-22 20:12 IST

ಸಾಂದರ್ಭಿಕ ಚಿತ್ರ

ಬೆಳಗಾವಿ : ಮನೆಯೊಂದಕ್ಕೆ ನುಗ್ಗಿದ ದುಷ್ಕರ್ಮಿಗಳು ತುಂಬು ಗರ್ಭಿಣಿಯನ್ನು ಚಾಕುವಿನಿಂದ ಇರಿದು ಕೊಲೆಗೈದ ದುರ್ಘಟನೆ ಇಲ್ಲಿನ ಅಥಣಿ ತಾಲೂಕಿನ ಚಿಕ್ಕೂಡ ಗ್ರಾಮದಲ್ಲಿ ರವಿವಾರ ನಡೆದಿದೆ.

ಹತ್ಯೆಗೀಡಾದ ಗರ್ಭಿಣಿಯನ್ನು ಚಿಕ್ಕೂಡ ಗ್ರಾಮದ ಸುವರ್ಣ ಮಾಂತಯ್ಯ ಮಠಪತಿ (35) ಎಂದು ಗುರುತಿಸಲಾಗಿದೆ. ಮಹಿಳೆಗೆ ಈಗಾಗಲೇ ನಾಲ್ವರು ಹೆಣ್ಣು ಮಕ್ಕಳಿದ್ದು, ಐದನೆ ಮಗುವಿನ ನಿರೀಕ್ಷೆಯಲ್ಲಿದ್ದರು. ವಾರದಲ್ಲಿ ಈಕೆ ಮಗುವಿಗೆ ಜನ್ಮ ನೀಡಬೇಕಿತ್ತು. ಹೆರಿಗೆಗೆ ದಿನಾಂಕವನ್ನು ವೈದ್ಯರು ನಿಗದಿ ಮಾಡಿದ್ದರು ಎನ್ನಲಾಗಿದೆ.

ಆದರೆ, ಶನಿವಾರ ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಹರಿತವಾದ ಆಯುಧದಿಂದ ಸುವರ್ಣ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಮಹಿಳೆಯ ಪತಿ ಮಧ್ಯಾಹ್ನ ಹಸುಗಳಿಗೆ ಮೇವು ತರಲು ತೋಟಕ್ಕೆ ಹೋಗಿದ್ದರು. ಮಕ್ಕಳು ಶಾಲೆಗೆ ಹೋಗಿದ್ದರಿಂದ ಮನೆಯಲ್ಲಿ ಯಾರೂ ಇರಲಿಲ್ಲ. ಈ ಸಮಯದಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ತೋಟದಿಂದ ಮೇವು ತಂದ ಪತಿಯು ತನ್ನ ಪತ್ನಿಯನ್ನು ಕರೆದರೂ ಮನೆಯಿಂದ ಹೊರಗೆ ಬಂದಿಲ್ಲ. ಆಗ ಸಮೀಪ ಬಂದು ನೋಡಿದಾಗ ಗರ್ಭಿಣಿಯು ರಕ್ತದ ಮಡಿಲಿನಲ್ಲಿ ಬಿದ್ದು ನರಳಾಡುತ್ತಿರುವುದು ಕಂಡುಬಂದಿದೆ.

ತಕ್ಷಣವೇ ಪಕ್ಕದ ಹಾರೂಗೇರಿ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ, ಗಂಭೀರವಾಗಿ ಗಾಯಗೊಂಡ ಮಹಿಳೆ ದಾರಿ ಮಧ್ಯದಲ್ಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಕೊಲೆಯನ್ನು ಯಾರು ಮಾಡಿದ್ದಾರೆ? ಏಕೆ ಮಾಡಿದ್ದಾರೆಂಬ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಈ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆಸಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News