ಬೆಳಗಾವಿ: ಕಾವೇರಿದ ಕಬ್ಬು ಬೆಳೆಗಾರರ ಹೋರಾಟ; 7ನೇ ದಿನವೂ ಮುಂದುವರಿದ ಅಹೋರಾತ್ರಿ ಧರಣಿ
ಬೆಳಗಾವಿ: ಗುರ್ಲಾಪುರ ಕ್ರಾಸ್‌ನಲ್ಲಿ ಕಬ್ಬು ಬೆಳೆಗಾರರ ಹೋರಾಟ ತೀವ್ರ ಸ್ವರೂಪ ಪಡೆದಿದೆ. ಕಬ್ಬಿನ ದರ ಏರಿಕೆಗಾಗಿ ನಡೆಯುತ್ತಿರುವ ಅಹೋರಾತ್ರಿ ಪ್ರತಿಭಟನೆ ಇಂದು 7ನೇ ದಿನಕ್ಕೆ ಕಾಲಿಟ್ಟಿದೆ. ಈ ಹೋರಾಟಕ್ಕೆ ಈಗ ಜಿಲ್ಲೆಯಾದ್ಯಂತ ರೈತರು ಹಾಗೂ ಸಂಘಟನೆಗಳಿಂದ ಭಾರೀ ಬೆಂಬಲ ವ್ಯಕ್ತವಾಗಿದೆ.
ಬೆಳಗಾವಿ ಸುವರ್ಣ ವಿಧಾನಸೌಧ ಬಳಿ ಕರವೇ ನಾರಾಯಣ ಗೌಡ ಬಣದವರು ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. “ಪ್ರತಿ ಟನ್ ಕಬ್ಬಿಗೆ ₹3500 ದರ ಕೊಡಿಸಬೇಕು” ಎಂಬುವುದು ಅವರ ಪ್ರಮುಖ ಆಗ್ರಹ.
ರೈತರ ಪ್ರತಿಯೊಂದು ಹೋರಾಟಕ್ಕೂ ತಮ್ಮ ಬೆಂಬಲವನ್ನು ಘೋಷಿಸಿದ ಕರವೇ ಮುಖಂಡರು ಸರ್ಕಾರ ರೈತರ ಹೋರಾಟಕ್ಕೆ ಸ್ಪಂದಿಸಬೇಕು ಎಂದು ಆಗ್ರಹಿಸಿದರು.
ಸುವರ್ಣ ವಿಧಾನಸೌಧದ ಮುಂದೆ ಹೆಚ್ಚುವರಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ. ಪ್ರತಿಭಟನೆಯಲ್ಲಿ ಭಾಗಿಯಾದವರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟೈರ್‌ಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಪೊಲೀಸರು ಹಾಗೂ ಕರವೇ ಕಾರ್ಯಕರ್ತರ ನಡುವೆ ವಾಗ್ವಾದ ಉಂಟಾಯಿತು. ಕರವೇ ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದೀಗ ಬಂದ್ ಮಾಡಿದ ರಾಷ್ಟ್ರೀಯ ಹೆದ್ದಾರಿಯನ್ನು ತೆರವುಗೊಳಿಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.