ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿ ಮಿತಿ ಪರಿಶೀಲನೆ: ಸಚಿವ ಬಿ.ಎಸ್.ಸುರೇಶ್
ಬೆಳಗಾವಿ, (ಸುವರ್ಣ ವಿಧಾನಸೌಧ), ಡಿ. 12: ಉಡುಪಿ ಜಿಲ್ಲೆಯ ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯಿಂದ ಕೆಲವು ಪ್ರದೇಶಗಳನ್ನು ಕೈಬಿಡುವ ಸಮರ್ಪಕತೆಯನ್ನು ಪರಿಶೀಲಿಸಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಹೇಳಿದ್ದಾರೆ.
ಶುಕ್ರವಾರ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಗುರುರಾಜ್ ಶೆಟ್ಟಿ ಗಂಟಿಹೊಳೆ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು. ಕೆಲವು ಪ್ರದೇಶಗಳನ್ನು ಕೈಬಿಡುವಂತೆ ಕೋರಿ ಹಲವು ಮನವಿಗಳು ಸ್ವೀಕೃತವಾಗಿವೆ. ಈ ಬಗ್ಗೆ ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದ್ದು, ಕೆಲವು ಪ್ರದೇಶಗಳನ್ನು ಪಟ್ಟಣ ಪಂಚಾಯಿತಿಯ ವ್ಯಾಪ್ತಿಯಿಂದ ಕೈಬಿಡುವ ಸಮರ್ಪಕತೆಯನ್ನು ಪರಿಶೀಲಿಸಲು ಮಾಹಿತಿ ಕೋರಲಾಗಿದೆ. ಮಾಹಿತಿ ದೊರೆತ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಿತಿಯನ್ನು ಮರುನಿಗದಿಗೊಳಿಸುವ ಪ್ರಸ್ತಾವನೆಗೆ ಅನುಮೋದನೆ ದೊರೆತ ನಂತರ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದೂ ಸಚಿವರು ಉಲ್ಲೇಖಿಸಿದರು.