×
Ad

ಚಿಕ್ಕೋಡಿ | ವಸತಿ ಶಾಲೆಯ 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

Update: 2025-09-12 18:15 IST

ಚಿಕ್ಕೋಡಿ : ತಾಲ್ಲೂಕಿನ ಹಿರೇಕೋಡಿ ಗ್ರಾಮದ ಹೊರವಲಯದಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿಗಳು ಶುಕ್ರವಾರ ಬೆಳಗಿನ ಉಪಹಾರ ಸೇವಿಸಿದ ನಂತರ ಅಸ್ವಸ್ಥಗೊಂಡ ಘಟನೆ ಬೆಳಕಿಗೆ ಬಂದಿದೆ.

ಬೆಳಿಗ್ಗೆ ಉಪ್ಪಿಟ್ಟು ಸೇವನೆ ಮಾಡಿದ ವಿದ್ಯಾರ್ಥಿ-ವಿದ್ಯಾರ್ಥಿನಿಯರಲ್ಲಿ ವಾಂತಿ ಹಾಗೂ ಬೇಧಿ ಕಾಣಿಸಿಕೊಂಡಿದ್ದು, ತೀವ್ರ ಅಸ್ವಸ್ಥರಾದವರನ್ನು ತಕ್ಷಣವೇ ಚಿಕ್ಕೋಡಿ ತಾಲ್ಲೂಕು ಆಸ್ಪತ್ರೆ ಮತ್ತು ತಾಯಿ-ಮಕ್ಕಳ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಅಪರ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್.ಎಸ್. ಗಡದ ಅವರ ಮಾಹಿತಿಯ ಪ್ರಕಾರ, ತಾಲ್ಲೂಕು ಆಸ್ಪತ್ರೆಯಲ್ಲಿ 37 ಬಾಲಕರು ಮತ್ತು 33 ಬಾಲಕಿಯರು, ತಾಯಿ-ಮಕ್ಕಳ ಆಸ್ಪತ್ರೆಯಲ್ಲಿ 3 ಬಾಲಕರು ಹಾಗೂ 7 ಬಾಲಕಿಯರು ಸೇರಿದಂತೆ ಒಟ್ಟು 80 ವಿದ್ಯಾರ್ಥಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ತೀವ್ರ ಅಸ್ವಸ್ಥಗೊಂಡ ಒಬ್ಬ ವಿದ್ಯಾರ್ಥಿನಿಯನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಒಟ್ಟು 400ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿರುವ ವಸತಿ ನಿಲಯದಲ್ಲಿ 177 ವಿದ್ಯಾರ್ಥಿಗಳಿಗೆ ಅಸ್ವಸ್ಥತೆ ಕಾಣಿಸಿಕೊಂಡಿದ್ದು, ಅವರಲ್ಲಿ 97 ಮಂದಿಗೆ ಹೊರ ರೋಗಿಗಳ ವಿಭಾಗದಲ್ಲೇ ಚಿಕಿತ್ಸೆ ನೀಡಲಾಗಿದೆ. ಉಳಿದ 80 ಮಂದಿಯನ್ನು ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ. ಸಂಜೆ ವೇಳೆಗೆ ಹೆಚ್ಚಿನ ವಿದ್ಯಾರ್ಥಿಗಳು ಚೇತರಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಆರೋಗ್ಯ ಇಲಾಖೆಯ ವೈದ್ಯರು ತಿಳಿಸಿದ್ದಾರೆ.

ಘಟನೆ ತಿಳಿದ ಕೂಡಲೇ ರಾಜ್ಯ ಸರಕಾರದ ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ್‌ ಹುಕ್ಕೇರಿ, ಅಪರ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಗಡದ, ತಾಲ್ಲೂಕು ಆರೋಗ್ಯಾಧಿಕಾರಿ ಡಾ ಸುಕುಮಾರ ಬಾಗಾಯಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು.

ವಸತಿ ನಿಲಯಕ್ಕೆ ಭೇಟಿ ನೀಡಿದ ಪ್ರಕಾಶ್‌ ಹುಕ್ಕೇರಿ ಅವರು ಸಿಬ್ಬಂದಿ ಹಾಗೂ ವೈದ್ಯರನ್ನು ತರಾಟೆಗೆ ತೆಗೆದುಕೊಂಡು, ಅಸ್ವಸ್ಥ ಮಕ್ಕಳಿಗೆ ತಕ್ಷಣ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದರು. ಅಲ್ಲದೆ, ವಸತಿ ನಿಲಯದಲ್ಲಿ ಶುದ್ಧ ಕುಡಿಯುವ ನೀರು ಹಾಗೂ ಸ್ವಚ್ಛತೆಗೆ ವಿಶೇಷ ಗಮನಹರಿಸುವಂತೆ ಸೂಚನೆ ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News