ಕೋಳಿ ಫಾರ್ಮ್ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ: 1.13 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ
ಸಾಂದರ್ಭಿಕ ಚಿತ್ರ (AI)
ಬೆಳಗಾವಿ: ಕೋಳಿ ಫಾರ್ಮ್ ಹೆಸರಿನಲ್ಲಿ ಅಕ್ರಮವಾಗಿ ಡ್ರಗ್ಸ್ ತಯಾರಿಕಾ ಘಟಕ ನಡೆಸುತ್ತಿದ್ದ ಪ್ರಕರಣ ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಚಂದಗಡ ತಾಲೂಕಿನ ರಾಜಗೋಳಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ಇಬ್ಬರು ಸೇರಿದಂತೆ ಒಟ್ಟು ಏಳು ಆರೋಪಿಗಳನ್ನು ಮಹಾರಾಷ್ಟ್ರ ಮಾದಕ ವಸ್ತು ವಿರೋಧಿ ಟಾಸ್ಕ್ ಫೋರ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ರಾಜಗೋಳಿ ಗ್ರಾಮದಲ್ಲಿ ಕೋಳಿ ಫಾರ್ಮ್ ಹೆಸರಿನಲ್ಲಿ ಫ್ಯಾಕ್ಟರಿ ನಡೆಸುತ್ತಿದ್ದ ಆರೋಪಿಗಳು, ಅಲ್ಲಿ ಎಂಡಿಎಂಎ ಮಾದಕ ವಸ್ತು ತಯಾರಿಸಿ ಮಹಾರಾಷ್ಟ್ರ, ಗೋವಾ ಹಾಗೂ ಕರ್ನಾಟಕ ರಾಜ್ಯಗಳಿಗೆ ಸರಬರಾಜು ಮಾಡುತ್ತಿದ್ದರು ಎನ್ನಲಾಗಿದೆ.
ಖಚಿತ ಮಾಹಿತಿ ಆಧರಿಸಿ ಫ್ಯಾಕ್ಟರಿ ಮೇಲೆ ದಾಳಿ ನಡೆಸಿದ ಅಧಿಕಾರಿಗಳು, 1.13 ಕೋಟಿ ಮೌಲ್ಯದ 208 ಗ್ರಾಂ ಎಂಡಿಎಂಎ ಮಾದಕ ವಸ್ತು, ವಿವಿಧ ರಾಸಾಯನಿಕ ವಸ್ತುಗಳು ಹಾಗೂ ಡ್ರಗ್ಸ್ ತಯಾರಿಕೆಗೆ ಬಳಸುತ್ತಿದ್ದ ಯಂತ್ರೋಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತರ ಪೈಕಿ ಇಬ್ಬರು ಬೆಳಗಾವಿಗೆ ಸೇರಿದವರು ಎಂದು ತಿಳಿದುಬಂದಿದೆ. ರಾಜಗೋಳಿ ಗ್ರಾಮವು ಬೆಳಗಾವಿ ಜಿಲ್ಲೆಯಿಂದ ಕೇವಲ 20 ಕಿ.ಮೀ. ಅಂತರದಲ್ಲಿರುವುದರಿಂದ ಪ್ರಕರಣ ಬೆಳಗಾವಿ ಜಿಲ್ಲೆಯಲ್ಲೂ ಆತಂಕಕ್ಕೆ ಕಾರಣವಾಗಿದೆ.
ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಮಹಾರಾಷ್ಟ್ರ ಪೊಲೀಸರು, ಡ್ರಗ್ಸ್ ತಯಾರಿಕೆ ಮತ್ತು ಮಾರಾಟ ಜಾಲದ ಕುರಿತು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ. ಆರೋಪಿಗಳು ಯಾರಿಗೆಲ್ಲ ಮಾದಕ ವಸ್ತುಗಳನ್ನು ಸರಬರಾಜು ಮಾಡುತ್ತಿದ್ದರು ಹಾಗೂ ಈ ಜಾಲದಲ್ಲಿ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬುದರ ಕುರಿತು ತನಿಖೆ ನಡೆಯುತ್ತಿದೆ.