ಗೋಕಾಕ | ಬಸ್–ಬೈಕ್ ಮುಖಾಮುಖಿ ಢಿಕ್ಕಿ; ತಂದೆ-ಮಗಳು ಸೇರಿ ಮೂವರು ಮೃತ್ಯು
ಸಾಂದರ್ಭಿಕ ಚಿತ್ರ
ಬೆಳಗಾವಿ : ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಕೊಣ್ಣೂರು ಗ್ರಾಮದ ಸಮೀಪ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ತಂದೆ-ಮಗಳು ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತರನ್ನು ಸೈಫ್ ಮುಲ್ಲಾ (29), ಸಿಜಾ ಮುಲ್ಲಾ (4) ಹಾಗೂ ಇಮ್ತಿಯಾಝ್ ಬಡಗಾಂವ (35) ಎಂದು ಗುರುತಿಸಲಾಗಿದೆ.
ಹಿಡಕಲ್‌ನಿಂದ ಗೋಕಾಕದತ್ತ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಎದುರಿನಿಂದ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಢಿಕ್ಕಿಯ ತೀವ್ರತೆಗೆ ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಅಪಘಾತದ ನಿಖರ ಕಾರಣದ ಕುರಿತು ತನಿಖೆ ಕೈಗೊಳ್ಳಲಾಗಿದೆ.
ಈ ಸಂಬಂಧ ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.