ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಖಂಡ್ರೆ ಆದೇಶ
Update: 2025-11-03 09:43 IST
ಬೆಂಗಳೂರು, ನ.3: ಬೆಳಗಾವಿ ಜಿಲ್ಲೆ ಖಾನಾಪುರ ಬಳಿ ಸುಳೇಗಾಳಿ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶದಿಂದ ಎರಡು ಆನೆಗಳು ಸಾವಿಗೀಡಾಗಿರುವ ಬಗ್ಗೆ ನೋವು ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ತನಿಖೆಗೆ ಆದೇಶ ನೀಡಿದ್ದಾರೆ.
ಕಳೆದ ಕೆಲವು ದಿನಗಳಿಂದ ಇದೇ ಪ್ರದೇಶದಲ್ಲಿ ಆನೆಗಳು ಓಡಾಡುತ್ತಿದ್ದರೂ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸೂಕ್ತ ಕ್ರಮ ಕೈಗೊಳ್ಳದೆ ಕರ್ತವ್ಯ ಲೋಪ ಎಸಗಿರುವುದೇ ಆನೆಗಳ ಸಾವಿಗೆ ಕಾರಣ ಎಂಬ ಆರೋಪವಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಿ, ಲೋಪವಿದ್ದಲ್ಲಿ ಶಿಸ್ತು ಕ್ರಮದ ಶಿಫಾರಸಿನೊಂದಿಗೆ ಐದು ದಿನಗಳ ಒಳಗಾಗಿ ವರದಿ ಸಲ್ಲಿಸಲು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಸೂಚಿಸಿದ್ದಾರೆ.
ಬೇಲಿಗೆ ವಿದ್ಯುತ್ ಸಂಪರ್ಕ ನೀಡಿ ಆನೆಗಳ ಸಾವಿಗೆ ಕಾರಣರಾದವರ ವಿರುದ್ಧ ಕಾನೂನು ರೀತ್ಯ ಪ್ರಕರಣ ದಾಖಲಿಸಲು ಈಶ್ವರ ಖಂಡ್ರೆ ನಿರ್ದೇಶನ ನೀಡಿದ್ದಾರೆ.