×
Ad

ಅಭಿವೃದ್ಧಿ ವಿಚಾರದಲ್ಲಿ ದ್ವೇಷ ರಾಜಕಾರಣ ಮಾಡಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Update: 2025-05-18 19:40 IST

ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ : ಅಭಿವೃದ್ಧಿ ವಿಚಾರದಲ್ಲಿ ನಾನಾಗಲಿ, ನನ್ನ ಸಹೋದರ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಆಗಲಿ ಎಂದೂ ದ್ವೇಷ ರಾಜಕಾರಣ ಮಾಡಿಲ್ಲ, ಮಾಡುವುದು ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.

ರವಿವಾರ ಬಾಳೇಕುಂದ್ರಿ ಬಿ.ಕೆ.ಗ್ರಾಮದ ಶ್ರೀರಾಮೇಶ್ವರ ದೇವಸ್ಥಾನದ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಬಳಿಕ ಮಾತನಾಡಿದ ಅವರು, ಬೆಳಗಾವಿ ಗ್ರಾಮೀಣ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವುದೇ ನನ್ನ ಕನಸು. ಅಧಿಕಾರವಿದ್ದಾಗ ಜನ ಸಾಮಾನ್ಯರ ಕೆಲಸ ಕಾರ್ಯಗಳನ್ನು ಮಾಡಿಕೊಡಬೇಕು. ನನಗೆ ತೊಂದರೆ ಕೊಟ್ಟವರಿಗೆ ಕೇಡು ಬಯಸುವಂತಹ ವಿಕೃತ ಮನಸ್ಸು ನನ್ನದಲ್ಲ ಎಂದು ಹೇಳಿದರು.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಜನರ ಸೇವೆ ಮಾಡಲು ನನಗೆ ಒಂದು ಅವಕಾಶ ಕೊಡಿ, ನಿಮ್ಮ ಮನೆ ಮಗಳಾಗಿ ಸೇವೆ ಮಾಡುತ್ತೇನೆ ಎಂದು ಚುನಾವಣೆ ಸಂದರ್ಭದಲ್ಲಿ ಮಾತು ಕೊಟ್ಟಿದ್ದೆ. ಇವತ್ತು ಅದೇ ರೀತಿ ಈ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತಿದ್ದೇನೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.

ಅಧಿಕಾರ ಯಾರಿಗೂ ಶಾಶ್ವತ ಅಲ್ಲ. ಅಧಿಕಾರ ಇರುವಾಗ ಜನರ ಪರವಾಗಿ ಮಾಡುವ ಕೆಲಸಗಳೇ ಶಾಶ್ವತವಾಗಿ ಉಳಿಯುತ್ತವೆ. ಈ ಕ್ಷೇತ್ರದ ಜನರ ಆಶೀರ್ವಾದದಿಂದಾಗಿ ಇಂದು ಸರಕಾರದಲ್ಲಿ ಸಚಿವೆಯಾಗಿದ್ದೇನೆ. ಕ್ಷೇತ್ರದ ವ್ಯಾಪ್ತಿಯಲ್ಲಿನ 114 ಹಳ್ಳಿಗಳಲ್ಲಿ 140 ದೇವಾಲಯಗಳನ್ನು ಜೀರ್ಣೋದ್ಧಾರ ಮಾಡಿದ್ದೇನೆ. ಸುಮಾರು 1.25 ಕೋಟಿ ರೂ.ವೆಚ್ಚದಲ್ಲಿ ಈ ದೇವಸ್ಥಾನ ನಿರ್ಮಾಣಗೊಳ್ಳಲಿದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮುಖಂಡರಾದ ಶಂಕರಗೌಡ ಪಾಟೀಲ್, ಹೊನಗೌಡ ಪಾಟೀಲ್, ಸುರೇಶ್ ಕಾಳೋಜಿ, ಉಮೇಶ್‍ರಾವ್ ಜಾಧವ್, ವಿನಯಗೌಡ ಪಾಟೀಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News