ಬೆಳಗಾವಿ | ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಮೂವರು ಆರೋಪಿಗಳ ಬಂಧನ, ಇಬ್ಬರು ಅಪ್ರಾಪ್ತರು ವಶಕ್ಕೆ
ಸಾಂದರ್ಭಿಕ ಚಿತ್ರ (PTI)
ಬೆಳಗಾವಿ: 15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ವಿಡಿಯೋ ರೆಕಾರ್ಡ್ ಮಾಡಿ ಬ್ಲ್ಯಾಕ್‌ಮೇಲ್ ಮಾಡಿರುವ ಘಟನೆ ಬೆಳಗಾವಿ ನಡೆದಿದೆ.
ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಇಬ್ಬರು ಅಪ್ರಾಪ್ತರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಗರ ಪೊಲೀಸ್ ಕಮಿಷನರ್ ಭೂಷಣ್ ಗುಲಾಬರಾವ್ ಬೊರಸೆ, "ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಶನಿವಾರ ಎಪಿಎಂಸಿ ಠಾಣೆಯಲ್ಲಿ 6 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. 24 ತಾಸಿನೊಳಗೆ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಂತ್ರಸ್ತೆ ಮತ್ತು ಆರೋಪಿಗಳು ಬೆಳಗಾವಿ ಜಿಲ್ಲೆಯವರೇ ಆಗಿದ್ದಾರೆ’ ಎಂದು ಅವರು ಹಳಿದ್ದಾರೆ.
"ಆರಂಭದಲ್ಲಿ ಒರ್ವ ಬಾಲಕಿಯನ್ನು ಪರಿಚಯಿಸಿಕೊಂಡು, ಸ್ನೇಹ ಬೆಳೆಸಿದ್ದಾನೆ. ಬಳಿಕ ಬಾಲಕಿಯನ್ನು ಪುಸಲಾಯಿಸಿಕೊಂಡು ಹೋಗಿ ಸ್ನೇಹಿತರ ಜೊತೆ ಸೇರಿ ಅತ್ಯಾಚಾರ ಮಾಡಿದ್ದಾರೆ. ಅತ್ಯಾಚಾರದ ಕೃತ್ಯವನ್ನು ಆರೋಪಿಗಳು ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದಾರೆ. ಬಳಿಕ ಅದನ್ನೇ ತೋರಿಸಿ ಬ್ಲ್ಯಾಕ್‌ಮೇಲ್ ಮಾಡಿ ಮತ್ತೆ ಮೂವರು ಆರೋಪಿಗಳಿಂದ ಸಾಮೂಹಿಕ ಅತ್ಯಾಚಾರ ನಡೆದಿದೆ. ಪ್ರಕರಣ ಸಂಬಂಧ ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಇಬ್ಬರು ಅಪ್ರಾಪ್ತರನ್ನು ವಶಕ್ಕೆ ಪಡೆಯಲಾಗಿದೆ. ಮತ್ತೋರ್ವ ಆರೋಪಿಯ ಬಂಧನಕ್ಕೆ ಶೋಧ ಕಾರ್ಯಾಚರಣೆ ನಡೆಸುತ್ತಿದ್ದೇವೆ" ಎಂದು ಪೊಲೀಸ್ ಕಮಿಷನರ್ ಹೇಳಿದ್ದಾರೆ.