ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಜಾರಕಿಹೊಳಿ ಸಹೋದರರು
ಬೆಳಗಾವಿ : ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿರುವುದು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ.
ಬೆಳಗಾವಿ ಜಿಲ್ಲೆಯ ಗೋಕಾಕ್‌ನ ಪ್ರಸಿದ್ಧ ಮೆರಕನಹಟ್ಟಿಯ ಲಕ್ಷ್ಮೀದೇವಿಯ ಜಾತ್ರೆಯ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಗೋಕಾಕ್ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುವ ಮೂಲಕ ಗಮನ ಸೆಳೆದಿದ್ದಾರೆ.
ಜೂ.30ರಿಂದ ಜುಲೈ 8ರ ವರೆಗೆ 9 ದಿನಗಳ ಕಾಲ ಜಾತ್ರೆ ಜರುಗಲಿದೆ. ಒಂದೇ ವೇದಿಕೆಯಲ್ಲಿ ಇಬ್ಬರು ಅಕ್ಕ-ಪಕ್ಕ ಕೂತಿದ್ದರೂ ಪರಸ್ಪರ ಮಾತನಾಡದೆ, ತಮಷ್ಟಕ್ಕೆ ತಾವು ಎಂಬಂತೆ ಇದ್ದರು. ಆದರೆ ವಿಷಯಾಧಾರಿತವಾಗಿ ಒಬ್ಬರಿಗೊಬ್ಬರು ಪೂರಕವಾಗಿ ಬೆಂಬಲಿಸಿದ್ದಾರೆ ಎನ್ನಲಾಗಿದೆ.
ಬೆಳಗಾವಿ ಜಿಲ್ಲಾಧಿಕಾರಿ ಮುಹಮ್ಮದ್ ರೋಷನ್ ಜಾತ್ರೆಯ ಪೂರ್ವ ಸಿದ್ಧತೆಗಳ ಬಗ್ಗೆ ವಿವರಣೆ ನೀಡಿದ್ದಾರೆ. ಜಾತ್ರೆ ಸಂದರ್ಭದಲ್ಲಿ ಜನ ಜಂಗುಳಿಯನ್ನು ನಿಯಂತ್ರಿಸಲು ಅಗತ್ಯ ಸಿಬ್ಬಂದಿ ನಿಯೋಜನೆ, ವಾಹನ ನಿಲುಗಡೆ ವ್ಯವಸ್ಥೆ ಸೇರಿದಂತೆ ಅಗತ್ಯ ಪೂರ್ವ ಸಿದ್ದತೆ ಸಂಬಂಧ ಮಾಹಿತಿ ನೀಡಿದ್ದಾರೆ.