‘ಗ್ಯಾರಂಟಿ ಯೋಜನೆಗಳ ಜಾರಿ’ ರಾಜ್ಯ ಸರಕಾರ ದೇಶಕ್ಕೇ ಮಾದರಿ: ಸತೀಶ್ ಜಾರಕಿಹೊಳಿ
ಬೆಳಗಾವಿ : ಭೂಮಿ ಮಂಜೂರು, ಶೈಕ್ಷಣಿಕ ಪ್ರಗತಿ, ಸಾರಿಗೆ ವ್ಯವಸ್ಥೆ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಬಡವರ ಪರವಾಗಿರುವ ಕಾಂಗ್ರೆಸ್ ಸರಕಾರ. ಪ್ರಸ್ತುತ ಅವಧಿಯಲ್ಲಿ ಗ್ಯಾರಂಟಿ ಯೋಜನೆಗಳ ಜಾರಿ ಮೂಲಕ ದೇಶಕ್ಕೆ ಮಾದರಿಯಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ರವಿವಾರ ನಗರದ ಕುಮಾರ ಗಂದರ್ವ ರಂಗಂಮದಿರದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ಗ್ಯಾರಂಟಿ ಅನುಷ್ಠಾನದ ಕುರಿತ ಕಾರ್ಯಾಗಾರ ಹಾಗೂ ಪ್ರಗತಿ ಪರಿಶೀಲನಾ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆ ಜಾರಿಗೂ ಮುನ್ನ ಅನೇಕ ಟೀಕೆಗಳು ಎದುರಾದರೂ ರಾಜ್ಯ ಸರಕಾರವು ಗ್ಯಾರಂಟಿಗಳನ್ನು ಜಾರಿಗೊಳಿಸಿ ಬಡಜನರನ್ನು ಆರ್ಥಿಕವಾಗಿ ಸ್ವಾವಲಂಭಿಗಳಾಗಿಸುವುದರ ಜೊತೆಗೆ ಸಮಾಜದ ಮುಖ್ಯವಾಹಿನಿಗೆ ತರಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಪ್ರತಿವರ್ಷ ಬಡವರ ಕಲ್ಯಾಣಕ್ಕಾಗಿ ಅನೇಕ ಕಾರ್ಯಕ್ರಮಗಳನ್ನು ನೀಡುತ್ತಿದೆ. ಸರಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ. ಈ ಯೋಜನೆಗಳು ರಾಜ್ಯದ ಪ್ರತಿಯೊಬ್ಬ ಫಲಾನುಭವಿಗೂ ಸಮರ್ಪಕವಾಗಿ ತಲುಪಿಸುವ ಕಾರ್ಯವಾಗಬೇಕು ಎಂದರು.
ಬರುವ ದಿನಗಳಲ್ಲಿ ಗ್ಯಾರಂಟಿಗಳಿಗೆ ಸಂಬಂಧಪಟ್ಟ ತಾಂತ್ರಿಕ ಲೋಪಗಳನ್ನು ಸರಿಪಡಿಸಲಾಗುವುದು. ಗ್ಯಾರಂಟಿಗಳ ಜೊತೆಗೆ ನೀರಾವರಿ, ರಸ್ತೆ, ಶೈಕ್ಷಣಿಕ ಸೇರಿ ಇನ್ನೂ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿತ್ತಿದೆ. ಪ್ರತಿಯೊಬ್ಬರಿಗೆ ಅಂದಾಜು 5ಸಾವಿರ ರೂ.ವರೆಗೆ ನೀಡಲಾಗುತ್ತಿದೆ. ಈ ಹಣವನ್ನು ಪ್ರತಿಯೊಬ್ಬರೂ ಉತ್ತಮ ಕಾರ್ಯಗಳಿಗೆ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ಮಾತನಾಡಿ, ಗ್ಯಾರಂಟಿ ಯೋಜನೆಗಳು ಜಾರಿಯಿಂದಾಗಿ ರಾಜ್ಯದಲ್ಲಿ ಸಾಕಷ್ಟು ಬದಲಾವಣೆಗಳು ಕಂಡು ಬರುತ್ತಿವೆ. ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದ್ದು ಈ ಯೋಜನೆಗಳು ಪ್ರತಿಯೊಬ್ಬ ಅರ್ಹರಿಗೆ ತಲುಪಿಸುವ ಕಾರ್ಯವಾಗಬೇಕು ಎಂದರು.
ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್.ಪಾಟೀಲ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಶಾಸಕರಾದ ರಾಜು(ಆಸೀಫ್)ಸೇಠ್, ಗಣೇಶ ಹುಕ್ಕೇರಿ, ಮುಖಂಡರಾದ ವಿನಯ ನಾವಲಗಟ್ಟಿ, ಲಕ್ಷ್ಮಣರಾವ್ ಚಿಂಗಳೆ, ಯುವರಾಜ ಕದಂ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.