×
Ad

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಖಾಸಗೀಕರಣ ಇಲ್ಲ : ಸಚಿವ ಶರಣಪ್ರಕಾಶ್ ಪಾಟೀಲ್

Update: 2025-12-08 21:45 IST

ಬೆಳಗಾವಿ(ಸುವರ್ಣ ವಿಧಾನಸೌಧ) : ಯಾವುದೇ ಕಾರಣಕ್ಕೂ ಸರಕಾರಿ ಒಡೆತನದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಖಾಸಗಿಕರಣ ಮಾಡುವ ಪ್ರಶ್ನೆಯೇ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಸ್ಪಷ್ಟಪಡಿಸಿದರು.

ಸೋಮವಾರ ವಿಧಾನಪರಿಷತ್‌ನ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ನಾಗರಾಜ್ ಯಾದವ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಿಗೆ ಸರಕಾರ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಒದಗಿಸಿಕೊಟ್ಟಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಮೇಲ್ದರ್ಜೆಗೇರಿಸಲಾಗುವುದು. ಯಾವುದೇ ಕಾರಣಕ್ಕೂ ಇವುಗಳನ್ನು ಖಾಸಗಿಯವರಿಗೆ ಒಪ್ಪಿಸುವ ಪ್ರಶ್ನೆಯೇ ಇಲ್ಲ ಎಂದು ಪುನರುಚ್ಚರಿಸಿದರು.

ಬೆಳಗಾವಿಯ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಿರ್ಲಕ್ಷ್ಯದಿಂದ ರೋಗಿಯ ಹೊಟ್ಟೆಯ ಗಡ್ಡೆಯ ಬದಲು ಕರಳು ತೆಗೆದು ಹಾಕಲಾಗಿದೆ ಎಂಬ ವದಂತಿ ಹರಡಿದೆ. ಇದು ಸರಕಾರದ ಗಮನಕ್ಕೆ ಬಂದಿದೆ. ಈತ ಮದ್ಯವ್ಯಸನಿಯಾಗಿದ್ದು, ಕರುಳಿನಲ್ಲಿ ರಂಧ್ರವಿರುವ ಬಗ್ಗೆ ತಾಲೂಕಿನ ಆಸ್ಪತ್ರೆಯಲ್ಲಿ ಸ್ಪಷ್ಟವಾಗಿ ನಮೂದಿಸಲಾಗಿದೆ. ರೋಗಿಗೆ ಅಪೆಂಡಿಸೆಕ್ಟಮಿ ಮಾಡಲಾಗಿದೆ. ಶಸ್ತ್ರಚಿಕಿತ್ಸೆಯ ವೇಳೆ ವೈದ್ಯರು ಕರಳನ್ನು ತೆಗೆದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ಖಾಸಗಿ ಆಸ್ಪತ್ರೆಯಲ್ಲಿ ತಪ್ಪು ಮಾಹಿತಿ:

ಚಿಕಿತ್ಸೆ ಬಳಿಕ ರೋಗಿಯು 2 ದಿನ ವಿಶ್ರಾಂತಿ ಪಡೆದಿದ್ದಾರೆ. ನಂತರ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಕರುಳು ತೆಗೆಯಲಾಗಿದೆ ಎಂದು ತಪ್ಪು ಮಾಹಿತಿ ನೀಡಿದ್ದಾನೆ. ಈ ನಿಟ್ಟಿನಲ್ಲಿ ಇಲಾಖೆ ವತಿಯಿಂದ ಸಮಿತಿ ರಚನೆ ಮಾಡಲಾಗಿತ್ತು. ಇದರಲ್ಲಿ ಬಿಮ್ಸ್ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯವಾಗಿಲ್ಲ ಎಂದು ವರದಿ ನೀಡಲಾಗಿದೆ. ಇದರಲ್ಲಿ ವೈದ್ಯರ ನಿರ್ಲಕ್ಷ್ಯ ಇಲ್ಲ ಎಂಬುದನ್ನು ಸ್ಪಷ್ಟಪಡಿಸಲಾಗಿದೆ ಎಂದು ಶರಣಪ್ರಕಾಶ್‌ ಪಾಟೀಲ್‌ ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News