ಬೆಳಗಾವಿ: ರೈತರು ಸಕ್ಕರೆ ಕಾರ್ಖಾನೆಗಳನ್ನು ಆರಂಭಿಸಲು ಒಪ್ಪಿಗೆ ಸೂಚಿಸಿದರೆ ಮಾತ್ರ ಕಾರ್ಖಾನೆಗಳು ಕಾರ್ಯಾರಂಭ ಮಾಡಲಿವೆ. ಸದ್ಯದ ಪರಿಸ್ಥಿತಿಯಲ್ಲಿ ಕಾರ್ಖಾನೆ ಮಾಲಕರು ಯಾವುದೇ ರಿಸ್ಕ್ ತೆಗೆದುಕೊಳ್ಳಲು ಸಿದ್ಧರಿಲ್ಲ. ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ರೈತರು ಹಾಗೂ ಕಾರ್ಖಾನೆ ಮಾಲೀಕರ ನಡುವೆ ಒಮ್ಮತ ಮೂಡುವುದು ಅಗತ್ಯ ಎಂದು ಲೋಕೋಪಯೋಗಿ ಇಲಾಖೆ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ನಗರದ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಬೇಡಿಕೆ ಹಾಗೂ ಸಕ್ಕರೆ ಕಾರ್ಖಾನೆಗಳ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ಕೈಗೊಳ್ಳಬೇಕಿದೆ. ರೈತರ ಒಪ್ಪಿಗೆ ಇಲ್ಲದೆ ಕಾರ್ಖಾನೆಗಳನ್ನು ಆರಂಭಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಸಕ್ಕರೆಯ ಕನಿಷ್ಠ ಮಾರಾಟ ಬೆಲೆ (ಎಂಎಸ್‌ಪಿ) ನಿರ್ಧರಿಸುವ ಅಧಿಕಾರ ಕೇಂದ್ರ ಸರ್ಕಾರಕ್ಕಿದೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರದ ಪಾತ್ರವಿಲ್ಲ. ಆದರೆ, ಕೇಂದ್ರ ಸರ್ಕಾರ ಎಂಎಸ್‌ಪಿ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದ ಅವರು, ಕಬ್ಬು ಬೆಳೆಗಾರರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಕೇಂದ್ರ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಹಿಂಡಲಗಾ ಜೈಲು ಚಳವಳಿ ಬಗ್ಗೆ ಮಾಹಿತಿ ಇಲ್ಲ :

ಗುರ್ಲಾಪುರದಲ್ಲಿ ಕಬ್ಬಿನ ದರ ಹೆಚ್ಚಳಕ್ಕೆ ಆಗ್ರಹಿಸಿ ಧರಣಿ ನಡೆಸುತ್ತಿರುವ ರೈತರು ಹಿಂಡಲಗಾ ಜೈಲು ಚಳವಳಿ ಹಮ್ಮಿಕೊಂಡಿರುವ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಸಚಿವರು ಹೇಳಿದರು. ರೈತರು ಜೈಲು ಚಳವಳಿ ನಡೆಸುತ್ತಿರುವ ವಿಚಾರ ತಮ್ಮ ಗಮನಕ್ಕೆ ಬಂದಿಲ್ಲ. ಈ ಕುರಿತು ಹೆಚ್ಚಿನ ಮಾಹಿತಿ ಪಡೆದುಕೊಳ್ಳುವುದಾಗಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳ ಅಧಿಸೂಚನೆ ಡಿ.15ರಂದು ಪ್ರಕಟವಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನವನ್ನು ನಿಗದಿತ ಅವಧಿಗಿಂತ ಮುಂಚಿತವಾಗಿ ನಡೆಸಲು ನಿರ್ಧರಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಡಿ.15ರಂದು ಜಿಪಂ ಮತ್ತು ತಾಪಂ ಚುನಾವಣೆಗಳ ಅಧಿಸೂಚನೆ ಹೊರಬರುವ ಸಾಧ್ಯತೆ ಇರುವುದರಿಂದ ಚುನಾವಣಾ ಪ್ರಕ್ರಿಯೆಗೆ ತೊಂದರೆಯಾಗದಂತೆ ಚಳಿಗಾಲದ ಅಧಿವೇಶನವನ್ನು ಬೇಗನೆ ನಡೆಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor