ಬೆಳಗಾವಿ: ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಆವರಣಕ್ಕೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅ. 29ರಂದು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ತರಕಾರಿ ವ್ಯಾಪಾರದಲ್ಲಿ ತೂಕದ ಮೋಸ, ದಲ್ಲಾಳಿಗಳ ಅಧಿಕ ಕಮಿಷನ್, ರಸೀದಿ ನೀಡದಿರುವುದು ಹಾಗೂ ಮೂಲಸೌಕರ್ಯಗಳ ಕೊರತೆ ಕಂಡುಬಂದ ಹಿನ್ನೆಲೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಮಾರುಕಟ್ಟೆಯ ತರಕಾರಿ ವ್ಯಾಪಾರಿಗಳ ತೂಕದ ಯಂತ್ರಗಳನ್ನು ಪರಿಶೀಲಿಸಿದ ಅವರು, ತೂಕದಲ್ಲಿ ಮೋಸ ನಡೆಯುತ್ತಿರುವುದು ಹಾಗೂ ದಲ್ಲಾಳಿಗಳು ಹೆಚ್ಚಿನ ಕಮಿಷನ್ ಪಡೆಯುತ್ತಿರುವ ಕುರಿತು ಪರಿಶೀಲನೆ ನಡೆಸಿದರು. ತರಕಾರಿ ಮಾರಾಟದ ಬಳಿಕ ವ್ಯಾಪಾರಿಗಳು ರಸೀದಿ ನೀಡದಿರುವುದನ್ನು ಗಮನಿಸಿ ಆಕ್ಷೇಪ ವ್ಯಕ್ತಪಡಿಸಿದರು.

ಮಾರುಕಟ್ಟೆಯಲ್ಲಿನ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತಗೊಂಡಿರುವುದು ಹಾಗೂ ಉಪಾಹಾರ ಗೃಹದಲ್ಲಿ ಸ್ವಚ್ಛತೆಯ ಕೊರತೆ ಕಂಡುಬಂದಿತು. ಉಪಾಹಾರ ಗೃಹದ ಅವ್ಯವಸ್ಥೆ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಅವರು, ಎಪಿಎಂಸಿ ಕಾರ್ಯದರ್ಶಿಯನ್ನು ತರಾಟೆಗೆ ತೆಗೆದುಕೊಂಡರು.

ಮಾರುಕಟ್ಟೆಯಲ್ಲಿ ರೈತರು ಮತ್ತು ಹಮಾಲರಿಗೆ ವಿಶ್ರಾಂತಿ ಗೃಹ ಹಾಗೂ ವಾಹನ ನಿಲುಗಡೆ ವ್ಯವಸ್ಥೆ ಇಲ್ಲದಿರುವ ಕುರಿತು ಮಾಹಿತಿ ಪಡೆದರು. ಹಮಾಲರಿಗೆ ಅಗತ್ಯ ಸೌಲಭ್ಯಗಳು ದೊರೆಯುತ್ತಿಲ್ಲ ಎಂಬ ದೂರಿನ ಹಿನ್ನೆಲೆಯಲ್ಲಿ, ಕಾರ್ಮಿಕ ಇಲಾಖೆಯ ಅಧಿಕಾರಿಗಳು ಎರಡು ದಿನಗಳೊಳಗೆ ಮಾರುಕಟ್ಟೆಯ ಎಲ್ಲ ಅಂಗಡಿಗಳ ಕಾರ್ಮಿಕರ ವಿವರ ಸಂಗ್ರಹಿಸಿ, ಅವರಿಗೆ ಸರ್ಕಾರದ ನಿಯಮಾನುಸಾರ ದೊರೆಯಬೇಕಾದ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಮಾರುಕಟ್ಟೆಯಲ್ಲಿನ ಶೌಚಾಲಯಗಳ ದುಸ್ಥಿತಿಯನ್ನು ಕಂಡು ಅಸಮಾಧಾನ ವ್ಯಕ್ತಪಡಿಸಿದ ಉಪ ಲೋಕಾಯುಕ್ತರು, ರೈತ ಭವನಕ್ಕೂ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಉಪನಿಬಂಧಕ ಅರವಿಂದ, ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಎನ್. ಶಿವಕುಮಾರ್, ಅಪರ ಜಿಲ್ಲಾಧಿಕಾರಿ ವಿಜಯಕುಮಾರ್ ಹೊನಕೇರಿ, ಉಪವಿಭಾಗಾಧಿಕಾರಿ ಶ್ರವಣ ನಾಯಕ, ಮಹಾನಗರ ಪಾಲಿಕೆ ಆಯುಕ್ತ ಕಾರ್ತಿಕ್ ಎಂ. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

 

 

 

 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor