ಐದು ವರ್ಷ ಸಿದ್ದರಾಮಯ್ಯನವರೇ ಸಿಎಂ : ಯತೀಂದ್ರ
"ಡಿ.ಕೆ.ಶಿವಕುಮಾರ್ ಅವಕಾಶ ಕೊಡಿ ಎಂದು ಕೇಳಿದ್ದರು"
ಯತೀಂದ್ರ ಸಿದ್ಧರಾಮಯ್ಯ
ಬೆಳಗಾವಿ(ಸುವರ್ಣ ವಿಧಾನಸೌಧ) : ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯನವರೇ ಐದು ವರ್ಷ ಮುಂದುವರೆಯುತ್ತಾರೆ ಎಂದು ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ಧರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅವಕಾಶ ಕೊಡಿ ಎಂದು ಕೇಳಿದ್ದರು. ಆದರೆ, ನಾಯಕತ್ವ ಬದಲಾವಣೆ ಪರಿಸ್ಥಿತಿ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ ಎಂದು ನುಡಿದರು.
ಕಾಂಗ್ರೆಸ್‍ನಲ್ಲಿ ಅಧಿಕಾರಕ್ಕಾಗಿ ಯಾವುದೇ ಕಿತ್ತಾಟ ನಡೆದಿಲ್ಲ. ಇದೆಲ್ಲಾ ಪ್ರತಿಪಕ್ಷದವರ ಸೃಷ್ಟಿ. ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಪರಿಸ್ಥಿತಿ ಇಲ್ಲ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ. ಮುಖ್ಯಮಂತ್ರಿ ಬದಲಾಗುತ್ತಾರೆ ಎಂಬುದೆಲ್ಲಾ ವದಂತಿ. ಸಿದ್ಧರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದು ಅವರು ತಿಳಿಸಿದರು.
ನಮ್ಮಲ್ಲಿ ಅಧಿಕಾರ ಹಂಚಿಕೆಯ ಕಿತ್ತಾಟ ಇಲ್ಲ. ಆ ರೀತಿಯ ವದಂತಿಯನ್ನು ಪ್ರತಿಪಕ್ಷದವರು ಹುಟ್ಟು ಹಾಕಿದ್ದಾರೆ. ಅಧಿಕಾರಕ್ಕೆ ಬಂದಾಗಿನಿಂದ ಸಿಎಂ ಬದಲಾಗುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ. ಆದರೆ ಸಿಎಂ ಬದಲಾಗುತ್ತಾರೆ ಎಂಬ ಕನಸು ಕಾಣಬೇಕು ಅಷ್ಟೇ ಎಂದು ಅವರು ಹೇಳಿದರು.