ಬಳ್ಳಾರಿ : ಅಖಂಡ ಬಳ್ಳಾರಿ ಜಿಲ್ಲೆಯ 23ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನವೆಂಬರ್ 14 ಮತ್ತು 15ರಂದು ನಗರದ ರಾಘವ ಕಲಾ ಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಬಳ್ಳಾರಿ-ವಿಜಯನಗರ ಜಿಲ್ಲಾಧ್ಯಕ್ಷ ಡಾ. ನಿಷ್ಠಿ ರುದ್ರಪ್ಪ ತಿಳಿಸಿದರು.

ನಗರದ ಖಾಸಗಿ ಹೋಟೆಲ್‌ನಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿರಿಯ ಪತ್ರಕರ್ತ ಹಾಗೂ ಸಾಹಿತಿ ಸಿ.ಜಿ. ಹಂಪಣ್ಣ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ. ಎರಡು ದಿನಗಳ ಕಾಲ ನಡೆಯಲಿರುವ ಈ ನುಡಿಹಬ್ಬದಲ್ಲಿ ಸಾಹಿತ್ಯ, ಸಂಸ್ಕೃತಿ, ರಂಗಭೂಮಿ ಹಾಗೂ ಚಿತ್ರಕಲೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಗೋಷ್ಠಿಗಳು ಮತ್ತು ಚಿಂತನ-ಮಂಥನ ನಡೆಯಲಿವೆ. ಸಾರ್ವಜನಿಕರು ಹಾಗೂ ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ನವೆಂಬರ್ 14ರಂದು ಬೆಳಿಗ್ಗೆ 7.30ಕ್ಕೆ ಮೇಯರ್ ಪಿ. ಗಾದೆಪ್ಪ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಇ. ಚಿದಾನಂದಪ್ಪ ಹಾಗೂ ಕಸಾಪ ಜಿಲ್ಲಾಧ್ಯಕ್ಷ ಡಾ. ನಿಷ್ಠಿ ರುದ್ರಪ್ಪ ಧ್ವಜಾರೋಹಣ ನೆರವೇರಿಸುವ ಮೂಲಕ ಸಮ್ಮೇಳನಕ್ಕೆ ಚಾಲನೆ ನೀಡಲಿದ್ದಾರೆ. ಬೆಳಿಗ್ಗೆ 10.30ಕ್ಕೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಕೊಟ್ಟೂರು ಬಸವಲಿಂಗ ಸ್ವಾಮೀಜಿ, ಕಲ್ಯಾಣ ಸ್ವಾಮೀಜಿ ಹಾಗೂ ಬಳ್ಳಾರಿಯ ಆರ್ಚ್‌ಬಿಷಪ್ ಡಿಸೋಜಾ ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಡಿ.ವಿ. ಪರಮಶಿವಮೂರ್ತಿ ಸಮ್ಮೇಳನ ಉದ್ಘಾಟಿಸಲಿದ್ದು, ನಗರ ಶಾಸಕ ನಾರಾ ಭರತ್ ರೆಡ್ಡಿ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ಈ. ತುಕಾರಾಂ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದು, ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಡಾ. ಅರವಿಂದ ಪಟೇಲ್ ಉಪಸ್ಥಿತರಿರಲಿದ್ದಾರೆ ಎಂದು ಮಾಹಿತಿ ನೀಡಿದರು.

ಮಧ್ಯಾಹ್ನ 2ರಿಂದ 3.30ರವರೆಗೆ ‘ಅಖಂಡ ಬಳ್ಳಾರಿ ಜಿಲ್ಲೆಯ ಮರೆಯಲಾರದ ಮಹಾನುಭಾವರು’ ವಿಷಯದ ಕುರಿತು ವಿಶೇಷ ಗೋಷ್ಠಿ ನಡೆಯಲಿದೆ. ಚೋರನೂರು ಟಿ. ಕೊಟ್ರಪ್ಪ ಅಧ್ಯಕ್ಷತೆ ವಹಿಸಲಿದ್ದು, ಡಾ. ಬಿ.ಜಿ. ಕಲಾವತಿ ಆಶಯ ನುಡಿಗಳನ್ನಾಡಲಿದ್ದಾರೆ. ಡಾ. ಅಣ್ಣಾಜಿ ಕೃಷ್ಣಾರೆಡ್ಡಿ (ರಂಗಭೂಮಿ), ಡಾ. ನಾಯಕರ ಹುಲಗಪ್ಪ (ಸಾಹಿತ್ಯ) ಹಾಗೂ ಕಾಶೀನಾಥ ಕಾಳೆ (ಚಿತ್ರಕಲೆ) ವಿಷಯ ಮಂಡಿಸಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಚಂದ್ರಶೇಖರ್ ಆಚಾರ್, ಕೆ. ಷಣ್ಮುಖ, ಕಾಶೀನಾಥ್, ದೊಡ್ಡಬಸಪ್ಪ ಹಾಗೂ ಎಲ್ಲನ್ ಗೌಡ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor