×
Ad

ಬಳ್ಳಾರಿಯಲ್ಲಿ ನ.4ರಿಂದ 11ರವರೆಗೆ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿ : ಡಿಸಿ ನಾಗೇಂದ್ರ ಪ್ರಸಾದ್ ಕೆ.

Update: 2025-10-17 16:23 IST

ಬಳ್ಳಾರಿ : ನ.4ರಿಂದ 11ರವರೆಗೆ ಜಿಲ್ಲೆಯಲ್ಲಿ ನಡೆಯಲಿರುವ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿಯನ್ನು ಅಚ್ಚುಕಟ್ಟಾಗಿ ಹಾಗೂ ಶಿಸ್ತುಬದ್ಧವಾಗಿ ಆಯೋಜಿಸಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ಹೇಳಿದರು.

ಶುಕ್ರವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಲ್ಲಚೇರುವು ಪ್ರದೇಶದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ರ‍್ಯಾಲಿಯಲ್ಲಿ ಯಾವುದೇ ಲೋಪವಾಗದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದು ಸೂಚಿಸಿದರು.

ರ‍್ಯಾಲಿ ಯಶಸ್ವಿಯಾಗಿ ನಡೆಯಲು ಎಲ್ಲಾ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕೆಲಸ ಮಾಡಬೇಕೆಂದು ಅವರು ಹೇಳಿದರು. ರ‍್ಯಾಲಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ವಸತಿ, ಊಟೋಪಚಾರ, ಕುಡಿಯುವ ನೀರು, ಶೌಚಾಲಯ, ವೈದ್ಯಕೀಯ ಸೌಲಭ್ಯ, ಭದ್ರತಾ ವ್ಯವಸ್ಥೆ ಸೇರಿದಂತೆ ಎಲ್ಲಾ ಮೂಲ ಸೌಕರ್ಯಗಳನ್ನು ವ್ಯವಸ್ಥಿತವಾಗಿ ಒದಗಿಸಬೇಕೆಂದು ಸೂಚಿಸಿದರು.

ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ ಹಾಗೂ ದೈಹಿಕ ಪರೀಕ್ಷೆ ಪಾರದರ್ಶಕವಾಗಿ ನಡೆಯುವಂತೆ ನೋಡಿಕೊಳ್ಳಬೇಕು. ಜನಸಂದಣಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಕಾನೂನು-ಸುವ್ಯವಸ್ಥೆ ಕಾಪಾಡುವ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮುಹಮ್ಮದ್ ಝುಬೇರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಯಲ್ಲಾ ರಮೇಶ್ ಬಾಬು, ಕರ್ನಲ್ ವಿವೇಕ್ ಜಮಿಂದಾರ್, ಮೇಜರ್ ಕಪಿಲ್ ಕೆ. ಸೇರಿದಂತೆ ಬಿಎಸ್‌ಎನ್‌ಎಲ್, ಅಗ್ನಿಶಾಮಕ, ಲೋಕೋಪಯೋಗಿ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News