ಬಳ್ಳಾರಿ: ಮಾಸಿಕ 15 ಸಾವಿರ ರೂ. ಗೌರವಧನ ನಿಗದಿಪಡಿಸಬೇಕು ಎಂದು ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಕೂಡಲೇ ಈಡೇರಿಸುವಂತೆ ಒತ್ತಾಯಿಸಿ, ನಗರದ ಸುಧಾ ಕ್ರಾಸ್ ಬಳಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್‌ಒ) ಜಿಲ್ಲಾ ಸಮಿತಿಯ ವತಿಯಿಂದ ಶನಿವಾರ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ಸಲಹೆಗಾರ ಆರ್. ಸೋಮಶೇಖರ್ ಗೌಡ ಮಾತನಾಡಿ, ಎಐಯುಟಿಯುಸಿ ನೇತೃತ್ವದಲ್ಲಿ ಆಶಾ ಕಾರ್ಯಕರ್ತೆಯರು ಚಳಿ, ಮಳೆ ಎನ್ನದೆ ಬೀದಿಯಲ್ಲೇ ಮಲಗಿ ನಡೆಸುತ್ತಿರುವ ಅಹೋರಾತ್ರಿ ಧರಣಿ 12ನೇ ದಿನಕ್ಕೆ ಕಾಲಿಟ್ಟಿದೆ. ಈ ಹಿಂದೆ ಸರ್ಕಾರ ನೀಡಿದ್ದ ಮೌಖಿಕ ಭರವಸೆಗಳು ಈಡೇರದ ಕಾರಣ, ಈ ಬಾರಿ ಲಿಖಿತ ಆದೇಶ ನೀಡಬೇಕೆಂಬ ಅವರ ಪಟ್ಟು ನ್ಯಾಯಯುತವಾಗಿದೆ ಎಂದರು.

ಹೋರಾಟದ ಆರಂಭದಲ್ಲಿ ಆಶಾ ಕಾರ್ಯಕರ್ತೆಯರನ್ನು ಸಹೋದರಿಯರು ಎಂದು ಕರೆದಿದ್ದ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸೇವೆಯಲ್ಲಿ ಶೇ. 80ರಷ್ಟು ಪಾಲು ಇವರದ್ದೇ ಎಂದು ಹೇಳಿದ್ದ ಸಚಿವರು, ಇದೀಗ ಬೇಜವಾಬ್ದಾರಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಕಾರ್ಪೊರೇಟ್ ಕಂಪನಿಗಳಿಗೆ ಸಾವಿರಾರು ಕೋಟಿ ರೂಪಾಯಿ ತೆರಿಗೆ ವಿನಾಯಿತಿ ನೀಡುವ ಸರ್ಕಾರಕ್ಕೆ, ಹಗಲಿರುಳು ದುಡಿಯುವ ಆಶಾ ಕಾರ್ಯಕರ್ತೆಯರಿಗೆ 15 ಸಾವಿರ ರೂ. ಗೌರವಧನ ನೀಡಲು ಹಣವಿಲ್ಲ ಎನ್ನುವುದು ನಾಚಿಕೆಗೇಡಿನ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಐಡಿಎಸ್‌ಒ ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ ಮಾತನಾಡಿ, ಆಶಾ ಕಾರ್ಯಕರ್ತೆಯರ ಹೋರಾಟದಿಂದ ಸ್ಫೂರ್ತಿ ಪಡೆದು, ಶಿಕ್ಷಣ ವ್ಯವಸ್ಥೆಯ ಖಾಸಗೀಕರಣದ ವಿರುದ್ಧ ವಿದ್ಯಾರ್ಥಿಗಳು ಹೋರಾಡಬೇಕಿದೆ. ಮಹಿಳೆಯರು ಮತ್ತು ಹಿಂದುಳಿದ ವರ್ಗಗಳ ಶಿಕ್ಷಣಕ್ಕಾಗಿ ಶ್ರಮಿಸಿದ ಜ್ಯೋತಿಬಾ ಫುಲೆ ಅವರ ವಿಚಾರಗಳನ್ನು ಶಾಲೆ, ಕಾಲೇಜು ಹಾಗೂ ಗ್ರಾಮೀಣ ಭಾಗಗಳಿಗೆ ತಲುಪಿಸಲಾಗುವುದು ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ಉಪಾಧ್ಯಕ್ಷ ಮಾನಯ್ಯ, ಎಐಡಿಎಸ್‌ಒ ಜಿಲ್ಲಾಧ್ಯಕ್ಷ ಕೆ. ಈರಣ್ಣ, ಉಪಾಧ್ಯಕ್ಷೆ ಎಂ. ಶಾಂತಿ, ಖಜಾಂಚಿ ಅನುಪಮಾ, ವಿದ್ಯಾರ್ಥಿಗಳಾದ ಶ್ವೇತಾ, ವಿನಯ್ ಹಾಗೂ ಇತರರು ಪಾಲ್ಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಪೀರಾಸಾಬ್/ವಾರ್ತಾಭಾರತಿ

contributor

ಬೂದುಗುಪ್ಪ ಪೀರಾಸಾಬ್ ಅವರು ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ವೆಬ್ ಪತ್ರಿಕೋದ್ಯಮದ ಜೊತೆಗೆ ಸಾಮಾಜಿಕ ಹಾಗೂ ರಾಜಕೀಯ ವಿಷಯಗಳ ವರದಿಗಾರಿಕೆಯಲ್ಲಿ ವಿಶೇಷ ಆಸಕ್ತಿ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿಯಲ್ಲಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ