×
Ad

ಗ್ಯಾರಂಟಿ ಯೋಜನೆಗಳಿಂದ ಸರಕಾರ ದಿವಾಳಿ ಆಗುತ್ತದೆ ಎನ್ನುವ ಆರೋಪ ಸುಳ್ಳು : ಸಚಿವ ಝಮೀರ್ ಅಹ್ಮದ್

Update: 2025-11-01 19:20 IST

ವಿಜಯನಗರ (ಹೊಸಪೇಟೆ) : ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ದಿವಾಳಿ ಆಗುತ್ತದೆ ಎನ್ನುವ ಆರೋಪ ಸಂಪೂರ್ಣ ಸುಳ್ಳು. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಜೋರಾಗಿ ನಡೆಯುತ್ತಿವೆ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಮತ್ತು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಝಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

ನಗರದ ಸಾಯಿಲೀಲಾ ರಂಗಮಂದಿರದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಶನಿವಾರ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಕಾರ್ಯಾಗಾರ ಹಾಗೂ ಗ್ಯಾರಂಟಿ ಉತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇದೇ ತಿಂಗಳ 9ರಂದು ಕೂಡ್ಲಿಗಿಯಲ್ಲಿ 1,240 ಕೋಟಿ ರೂ. ವೆಚ್ಚದ ಅಭಿವೃದ್ಧಿ ಯೋಜನೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೂಮಿಪೂಜೆ ನೆರವೇರಿಸಲಿದ್ದಾರೆ. ಇದು ರಾಜ್ಯದ ಪ್ರಗತಿ ಮತ್ತು ಅಭಿವೃದ್ಧಿಯತ್ತ ಸಾಗುತ್ತಿರುವ ದೃಢ ಸಾಕ್ಷಿಯಾಗಿದೆ ಎಂದು ಹೇಳಿದರು.

ಪಂಚ ಗ್ಯಾರಂಟಿ ಯೋಜನೆಗಳು ಬಡಜನ, ರೈತರು ಹಾಗೂ ಮಹಿಳೆಯರನ್ನು ಆರ್ಥಿಕವಾಗಿ ಸಶಕ್ತರನ್ನಾಗಿಸುತ್ತಿವೆ. ಶಕ್ತಿ ಯೋಜನೆಯಡಿ ಉಚಿತ ಸಾರಿಗೆ, ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್, ಅನ್ನಭಾಗ್ಯ ಯೋಜನೆಯಡಿ ಆಹಾರ ಭದ್ರತೆ, ಹಾಗೂ ಯಜಮಾನಿಯರಿಗೆ ಪ್ರತಿ ತಿಂಗಳು 2,000 ರೂ. ಹಣ ವಿತರಿಸುವ ಮೂಲಕ ಸ್ವಾವಲಂಬಿ ಮತ್ತು ಸ್ವಾಭಿಮಾನಿ ಬದುಕು ಸಾಧ್ಯವಾಗಿದೆ ಎಂದರು.

ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ರಾಜ್ಯಾಧ್ಯಕ್ಷ ಹೆಚ್.ಎಂ.ರೇವಣ್ಣ ಅವರು ಮಾತನಾಡಿ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಗ್ಯಾರಂಟಿ ಉತ್ಸವಗಳನ್ನು ಆಯೋಜಿಸಿ, ಯೋಜನೆಗಳ ಅನುಷ್ಠಾನ ಪ್ರಗತಿಯನ್ನು ಜನರ ಮುಂದೆ ಇಡಲಾಗುತ್ತಿದೆ. ವಿಭಾಗ, ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ಸಮಿತಿಗಳನ್ನು ರಚಿಸಿ ಯೋಜನೆಗಳನ್ನೂ ತಲುಪಿಸುವ ಕಾರ್ಯ ನಡೆಯುತ್ತಿದೆ ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ರಾಜ್ಯ ಉಪಾಧ್ಯಕ್ಷ ಎಸ್.ಆರ್. ಮೆಹರೂಜ್ ಖಾನ್, ಗ್ಯಾರಂಟಿ ಯೋಜನೆಗಳು ಅಂತರರಾಷ್ಟ್ರೀಯ ಮಟ್ಟದಲ್ಲೂ ಚರ್ಚೆಗೆ ಕಾರಣವಾಗಿವೆ. ಅನೇಕ ಆರ್ಥಿಕ ತಜ್ಞರು ಸಕಾರಾತ್ಮಕ ವರದಿ ನೀಡಿದ್ದಾರೆ. ಕರ್ನಾಟಕ ಜಿಎಸ್‌ಟಿ ಪಾವತಿಯಲ್ಲಿ ದೇಶದಲ್ಲಿ 2ನೇ ಸ್ಥಾನದಲ್ಲಿದ್ದು, ತಲಾ ಆದಾಯದಲ್ಲಿ ನಂ.1 ಸ್ಥಾನದಲ್ಲಿದೆ ಎಂದು ತಿಳಿಸಿದರು.

ಜಾಗೃತ ಕರ್ನಾಟಕ ಸಂಸ್ಥೆಯ ಡಾ.ವಾಸು ಎಚ್.ವಿ. ಗ್ಯಾರಂಟಿ ಯೋಜನೆಗಳು ಮತ್ತು ರಾಜ್ಯದ ಅಭಿವೃದ್ಧಿ ಕುರಿತು ಪಿಪಿಟಿ ಪ್ರಸ್ತುತಪಡಿಸಿ ಉಪನ್ಯಾಸ ನೀಡಿದರು.

ವೇದಿಕೆಯಲ್ಲಿ ಗ್ಯಾರಂಟಿ ಯೋಜನೆಯ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರಾದ ಸೂರಜ್ ಹೆಗಡೆ, ಪುಷ್ಪಾ ಅಮರನಾಥ, ಜಿಲ್ಲಾಧ್ಯಕ್ಷ ಕುರಿ ಶಿವಮೂರ್ತಿ ಮಾತನಾಡಿದರು.

ವೇದಿಕೆಯಲ್ಲಿ ಮಾಜಿ ಸಚಿವ ಆಂಜನೇಯ, ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎನ್.ಎಫ್.ಇಮಾಮ್ ನಿಯಾಜಿ, ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಜಾಯ್ ಮೋಹಮ್ಮದ್ ಅಕ್ರಮ್ ಅಲಿ ಷಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಎಸ್.ಶ್ವೇತಾ, ಅಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆ ಉಪನಿರ್ದೇಶಕ ರಿಯಾಝ್, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಹುದ್ದಾರ, ಜೆಸ್ಕಾಂ ಕಾರ್ಯಪಾಲಕ ಅಭಿಯಂತರ ಕೆ.ಸತೀಶ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಹಟ್ಟೆಪ್ಪ.ಪಿ.ಎಸ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಗ್ಯಾರಂಟಿ ಅನುಷ್ಟಾನ ಸಮಿತಿಯ ತಾಲೂಕು ಪದಾಧಿಕಾರಿಗಳು, ಮಹಿಳಾ ಸ್ವಸಹಾಯ ಗುಂಪುಗಳು, ವಿವಿಧ ರೈತಪರ ಸಂಘಟನೆ ಪದಾಧಿಕಾರಿಗಳು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News