ಸಂವಿಧಾನದ ಹಕ್ಕುಗಳ ಜೊತೆಗೆ ಕರ್ತವ್ಯಗಳ ಅರಿವೂ ಅಗತ್ಯ: ಶಾಸಕಿ ಅನ್ನಪೂರ್ಣ
ಸಂಡೂರು: ಸಂವಿಧಾನವು ನಾಗರಿಕರಿಗೆ ಹಕ್ಕುಗಳನ್ನು ನೀಡಿರುವಂತೆಯೇ ಕರ್ತವ್ಯಗಳನ್ನೂ ನಿರ್ದಿಷ್ಟಪಡಿಸಿದೆ. ಹಕ್ಕುಗಳನ್ನು ಅನುಭವಿಸುವುದರ ಜೊತೆಗೆ ಕರ್ತವ್ಯಗಳನ್ನು ಅರಿತು ಜವಾಬ್ದಾರಿಯುತವಾಗಿ ನಡೆಯಬೇಕು ಎಂದು ಶಾಸಕಿ ಅನ್ನಪೂರ್ಣ ಈ. ತುಕಾರಾಂ ಹೇಳಿದರು.
ಪಟ್ಟಣದ ಅಂಬೇಡ್ಕರ್ ಭವನದಲ್ಲಿ ತಾಲೂಕು ಆಡಳಿತದ ವತಿಯಿಂದ ಗುರುವಾರ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಡಾ. ಬಿ.ಆರ್. ಅಂಬೇಡ್ಕರ್ ಅವರು ಅಪಾರ ಅಧ್ಯಯನ ಹಾಗೂ ಪರಿಶ್ರಮದಿಂದ ಸಮಾನತೆ, ಸ್ವಾತಂತ್ರ್ಯ, ನ್ಯಾಯ ಮತ್ತು ಸಹೋದರತ್ವದ ಮೌಲ್ಯಗಳನ್ನು ಪ್ರತಿಪಾದಿಸುವ ಶ್ರೇಷ್ಠ ಸಂವಿಧಾನವನ್ನು ನೀಡಿದ್ದಾರೆ. ವಿದ್ಯಾರ್ಥಿಗಳು ಹಾಗೂ ಯುವಜನತೆ ಮೊಬೈಲ್, ಸಾಮಾಜಿಕ ಜಾಲತಾಣಗಳಲ್ಲಿ ಸಮಯ ವ್ಯರ್ಥ ಮಾಡದೆ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಪೋಷಕರು, ಗುರುಗಳು ಹಾಗೂ ದೇಶದ ಬಗ್ಗೆ ಗೌರವ ಬೆಳೆಸಿಕೊಳ್ಳಬೇಕು ಎಂದರು.
ಬಸ್ ನಿಲ್ದಾಣ ಸೇರಿದಂತೆ ಸಾರ್ವಜನಿಕ ಆಸ್ತಿ ಮತ್ತು ಸೌಲಭ್ಯಗಳನ್ನು ಹಾಳು ಮಾಡಬಾರದು. ಎಲ್ಲೆಂದರಲ್ಲಿ ಕಸ ಎಸೆಯದೆ ಸ್ವಚ್ಛತೆ ಕಾಪಾಡಬೇಕು. ಅಪಘಾತಗಳು ಸಂಭವಿಸಿದಾಗ ಮೊಬೈಲ್‌ನಲ್ಲಿ ವಿಡಿಯೊ ಚಿತ್ರೀಕರಿಸುವ ಬದಲು ಸಂತ್ರಸ್ತರಿಗೆ ನೆರವಾಗುವ ಮಾನವೀಯತೆ ತೋರಬೇಕು ಎಂದು ಕಿವಿಮಾತು ಹೇಳಿದರು.
ಈ ವೇಳೆ ತಹಶೀಲ್ದಾರ್ ಸುಧಾ ಅರಮನೆ, ಪುರಸಭೆ ಅಧ್ಯಕ್ಷ ಅಕ್ಷಯ್ ಲಾಡ್, ತಾ.ಪಂ. ಇಒ ರೇಣುಕಾಚಾರ್ಯ ಸ್ವಾಮಿ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ನೂರುದ್ದೀನ್, ಜಿಲ್ಲಾ ಉಪಾಧ್ಯಕ್ಷೆ ಆಶಾಲತಾ ಸೋಮಪ್ಪ, ಬಿಇಒ ಡಾ. ಐ.ಆರ್. ಅಕ್ಕಿ, ಪುರಸಭೆ ಮುಖ್ಯಾಧಿಕಾರಿ ವಿನಯ್ ಕುಮಾರ್ ಗೌಡ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ವೆಂಕಟೇಶ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿದ್ದಣ್ಣ ಯಳವಾರ್, ಮುಖಂಡ ತುಮಟಿ ಲಕ್ಷ್ಮಣ ಉಪಸ್ಥಿತರಿದ್ದರು.