ಸಿರುಗುಪ್ಪ: ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಸಿರುಗುಪ್ಪ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಎ.ಯಲ್ಲಪ್ಪ ಆಯ್ಕೆಯಾಗಿದ್ದಾರೆ.

ನಗರದ ಅಭಯಾಂಜನೇಯ ದೇವಸ್ಥಾನದ ಸಭಾಂಗಣದಲ್ಲಿ ಶನಿವಾರ ನಡೆದ ಘಟಕದ ಉದ್ಘಾಟನೆ ಹಾಗೂ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಗುರುಬಸವ ಮಠದ ಬಸವ ಭೂಷಣ ಸ್ವಾಮೀಜಿ ಮಾತನಾಡಿ, ಕನ್ನಡ ಭಾಷೆ, ನಾಡು-ನುಡಿ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯವಾಗಿದೆ ಎಂದು ಹೇಳಿದರು.

ಕನ್ನಡ ಸಾಹಿತ್ಯವು ನಾಡಿನ ಸಾಂಸ್ಕೃತಿಕ ಅಸ್ಮಿತೆ, ಸಾಮಾಜಿಕ ಚಿಂತನೆ ಹಾಗೂ ಮಾನವೀಯ ಮೌಲ್ಯಗಳ ಸಂಪತ್ತಾಗಿದೆ. ಕುವೆಂಪು ಅವರ ವಿಶ್ವಮಾನವ ಸಂದೇಶ ಸಾಹಿತ್ಯಕ್ಕೆ ಜಾಗತಿಕ ಮೌಲ್ಯ ತಂದುಕೊಟ್ಟಿದೆ. ವೇದಿಕೆಯು ಗ್ರಾಮೀಣ ಭಾಗದ ಪ್ರತಿಭೆಗಳನ್ನೂ ಗುರುತಿಸಿ ಪ್ರೋತ್ಸಾಹಿಸಬೇಕು ಎಂದು ಸಲಹೆ ನೀಡಿದರು.

ವೇದಿಕೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಸ್ನೇಹಜೀವಿ ಸಮುದ್ರವಳ್ಳಿ ವಾಸು ಮಾತನಾಡಿ, ಎಲೆಮರೆಯ ಕಾಯಿಯಂತಿರುವ ಸಾಹಿತ್ಯ ಪ್ರತಿಭೆಗಳನ್ನು ಗುರುತಿಸಿ ಬೆಳೆಸುವುದು ಸಂಘಟನೆಯ ಮುಖ್ಯ ಉದ್ದೇಶವಾಗಿದೆ. ಭಾಷೆ, ಕಲೆ, ಸಂಪ್ರದಾಯ ಹಾಗೂ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಪರಿಚಯಿಸಲು ವೇದಿಕೆ ಬದ್ಧವಾಗಿದೆ ಎಂದರು.

ಇದೇ ಸಂದರ್ಭದಲ್ಲಿ ನೂತನ ಅಧ್ಯಕ್ಷ ಎ. ಯಲ್ಲಪ್ಪ ಅವರಿಗೆ ನೇಮಕಾತಿ ಪ್ರಮಾಣಪತ್ರ ನೀಡಿ ಗೌರವಿಸಲಾಯಿತು. ಜೆ. ನರಸಿಂಹಮೂರ್ತಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕವಿಗೋಷ್ಠಿಯಲ್ಲಿ ಕವಿಗಳು ಸ್ವರಚಿತ ಕವನಗಳನ್ನು ವಾಚಿಸಿದರು. ಕುಡುದರಹಾಳು ಗ್ರಾಮದ ತಾಯಮ್ಮ ದೇವಸ್ಥಾನದ ಶಿವಕುಮಾರ ತಾತನವರು ಹಾಗೂ ಶಿಕ್ಷಕ ಪಂಪಾಪತಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ನಿಕಟಪೂರ್ವ ಅಧ್ಯಕ್ಷ ಲಿಂಗರಾಜ ರೆಡ್ಡಿ, ಉಪಾಧ್ಯಕ್ಷರಾದ ಗಜೇಂದ್ರ ಕೆ., ಮೊಹಮ್ಮದ್ ಖಾಸೀಂ, ಕಾರ್ಯದರ್ಶಿ ಕೆ. ಯರೆಪ್ಪ, ಸಂಘಟನಾ ಕಾರ್ಯದರ್ಶಿಗಳಾದ ಮಾರುತಿ ಸಿ.ಆರ್.ಪಿ., ಹಳೇಕೋಟೆ ನಾಗಪ್ಪ ಮತ್ತಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಪೀರಾಸಾಬ್/ವಾರ್ತಾಭಾರತಿ

contributor

ಬೂದುಗುಪ್ಪ ಪೀರಾಸಾಬ್ ಅವರು ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ವೆಬ್ ಪತ್ರಿಕೋದ್ಯಮದ ಜೊತೆಗೆ ಸಾಮಾಜಿಕ ಹಾಗೂ ರಾಜಕೀಯ ವಿಷಯಗಳ ವರದಿಗಾರಿಕೆಯಲ್ಲಿ ವಿಶೇಷ ಆಸಕ್ತಿ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿಯಲ್ಲಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ