Ballari | ಹಾಲುಮತ ಸಮಾಜಕ್ಕೆ 10 ಎಕರೆ ಭೂಮಿ, ಕಟ್ಟಡ ನಿರ್ಮಾಣಕ್ಕೆ 50 ಲಕ್ಷ ರೂ. ಅನುದಾನ: ಶಾಸಕ ಭರತ್ ರೆಡ್ಡಿ
ಬಳ್ಳಾರಿ: ಹಾಲುಮತ ಸಮಾಜದ ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರದೊಂದಿಗೆ ಚರ್ಚಿಸಿ ಶೀಘ್ರದಲ್ಲೇ 10 ಎಕರೆ ಭೂಮಿ ಮಂಜೂರು ಮಾಡಲು ಕ್ರಮ ಕೈಗೊಳ್ಳಲಾಗುವುದು. ಸಮಾಜದ ಕಟ್ಟಡ ನಿರ್ಮಾಣಕ್ಕೆ 50 ಲಕ್ಷ ರೂ. ಸಹಾಯಧನ ನೀಡಲಾಗುವುದು ಎಂದು ನಗರ ಶಾಸಕ ನಾರಾ ಭರತ್ ರೆಡ್ಡಿ ಭರವಸೆ ನೀಡಿದರು.
ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಗುರುವಾರ ಆಯೋಜಿಸಿದ್ದ ಕನಕದಾಸರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನಗರದಲ್ಲಿ ಸಂಗೊಳ್ಳಿ ರಾಯಣ್ಣ ಅವರ ಪುತ್ಥಳಿ ನಿರ್ಮಿಸಲಾಗುತ್ತಿದ್ದು, ಜನವರಿಯಲ್ಲಿ ಉದ್ಘಾಟಿಸಲಾಗುವುದು. ರಾಜ್ಯ ಸರ್ಕಾರ ಸಮಾಜದ ಏಳಿಗೆಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆ ಎಂದು ಹೇಳಿದರು.
ಸರಳಾದೇವಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಕೆ. ಬಸಪ್ಪ ಮಾತನಾಡಿ, ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಜಾತಿ ವ್ಯವಸ್ಥೆ ಹಾಗೂ ಅಸಮಾನತೆಯ ವಿರುದ್ಧ ಧ್ವನಿ ಎತ್ತಿದ ಮಹಾನ್ ಸಂತರು. ಅವರ ಸಾಹಿತ್ಯ ಇಂದಿಗೂ ಪ್ರಸ್ತುತವಾಗಿದ್ದು, ವಿದ್ಯಾರ್ಥಿಗಳು ಅದನ್ನು ಅಧ್ಯಯನ ಮಾಡಬೇಕು ಎಂದು ಸಲಹೆ ನೀಡಿದರು.
ಭವ್ಯ ಮೆರವಣಿಗೆ: ಇದಕ್ಕೂ ಮುನ್ನ ಬೆಳಗ್ಗೆ 9ಕ್ಕೆ ಕನಕ ವೃತ್ತದಲ್ಲಿರುವ ಕನಕದಾಸರ ಪುತ್ಥಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ., ಜಿಲ್ಲಾ ಪಂಚಾಯಿತಿ ಸಿಇಒ ಮುಹಮ್ಮದ್ ಹಾರಿಸ್ ಸುಮೇರ್, ಪೊಲೀಸ್ ಅಧೀಕ್ಷಕ ಸುಮನ್ ಡಿ.ಪಿ., ಮೇಯರ್ ಪಿ. ಗಾದೆಪ್ಪ ಹಾಗೂ ಪಾಲಿಕೆ ಆಯುಕ್ತ ರಾಜೇಶ್ ಮಾಲಾರ್ಪಣೆ ಮಾಡಿದರು.
ಬಳಿಕ ವಾಲ್ಮೀಕಿ ವೃತ್ತ, ಕನಕದುರ್ಗಮ್ಮ ದೇವಸ್ಥಾನ, ಗಡಿಗಿ ಚನ್ನಪ್ಪ ವೃತ್ತ, ಬೆಂಗಳೂರು ರಸ್ತೆ, ತೇರು ಬೀದಿ ಹಾಗೂ ಎಚ್.ಆರ್. ಗವಿಯಪ್ಪ ವೃತ್ತದ ಮೂಲಕ ರಂಗಮಂದಿರದವರೆಗೆ ಭವ್ಯ ಮೆರವಣಿಗೆ ನಡೆಯಿತು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ನರಸಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ. ನಾಗರಾಜ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ. ಚಿದಾನಂದಪ್ಪ, ತಾಲ್ಲೂಕು ಅಧ್ಯಕ್ಷ ಗೋನಾಳು ನಾಗಭೂಷಣ ಹಾಗೂ ಪಾಲಿಕೆ ಸದಸ್ಯೆ ಈರಮ್ಮ ಉಪಸ್ಥಿತರಿದ್ದರು.