Ballari | ಅವೈಜ್ಞಾನಿಕ ಚರಂಡಿ ಕಾಮಗಾರಿ ಆರೋಪ : ಕುರೆಕುಪ್ಪ 5ನೇ ವಾರ್ಡ್‌ ನಿವಾಸಿಗಳ ಪ್ರತಿಭಟನೆ

Update: 2026-08-12 19:45 IST

ಸಂಡೂರು/ಬಳ್ಳಾರಿ: ತಾಲ್ಲೂಕಿನ ಕುರೆಕುಪ್ಪ ಪಟ್ಟಣದ 5ನೇ ವಾರ್ಡ್‌ನಲ್ಲಿ ಪುರಸಭೆ ವತಿಯಿಂದ ಕೈಗೊಳ್ಳಲಾಗುತ್ತಿರುವ ಚರಂಡಿ ಕಾಮಗಾರಿ ಅವೈಜ್ಞಾನಿಕವಾಗಿದ್ದು, ನಿವಾಸಿಗಳಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ವಾರ್ಡ್‌ ನಿವಾಸಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.

ಚರಂಡಿ ಕಾಮಗಾರಿಯಿಂದ ಮನೆಗಳ ಮುಂಭಾಗದಲ್ಲಿ ನೀರು ನಿಂತುಕೊಳ್ಳುತ್ತಿದ್ದು, ಕೊಳಚೆ ನೀರು ಹರಿಯುತ್ತಿರುವ ಪರಿಣಾಮ ದುರ್ವಾಸನೆ ಹಾಗೂ ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಇದರಿಂದ ನಿವಾಸಿಗಳ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುವ ಆತಂಕ ಎದುರಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಇದರ ಜತೆಗೆ ಕಳೆದ ಐದು ದಿನಗಳಿಂದ ವಾರ್ಡ್‌ನಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, ನಿವಾಸಿಗಳು ನೀರಿಗಾಗಿ ಪರದಾಡುವಂತಾಗಿದೆ. ಚರಂಡಿ ಕಾಮಗಾರಿ ವೇಳೆ ನೀರಿನ ಪೈಪ್‌ಲೈನ್‌ಗೆ ಹಾನಿಯಾಗಿರುವ ಸಾಧ್ಯತೆಯಿದ್ದು, ಕೂಡಲೇ ದುರಸ್ತಿಪಡಿಸಿ ಸಮರ್ಪಕ ಕುಡಿಯುವ ನೀರು ಪೂರೈಸಬೇಕು ಎಂದು ಒತ್ತಾಯಿಸಿದರು.

ವಾರ್ಡ್‌ ನಿವಾಸಿ ಪರುಶುರಾಮ ಮಾತನಾಡಿ, ಚರಂಡಿ ಕಾಮಗಾರಿಯನ್ನು ವೈಜ್ಞಾನಿಕವಾಗಿ ಕೈಗೊಳ್ಳದಿರುವುದರಿಂದ ಮನೆಗಳ ಮುಂಭಾಗದಲ್ಲಿ ಕೊಳಚೆ ನೀರು ಹರಿಯುತ್ತಿದೆ. ಕೂಡಲೇ ಅವೈಜ್ಞಾನಿಕ ಕಾಮಗಾರಿಯನ್ನು ಸರಿಪಡಿಸಿ, ನೂತನ ಚರಂಡಿ ಹಾಗೂ ಸಿಸಿ ರಸ್ತೆ ನಿರ್ಮಿಸಬೇಕು. ಹಾನಿಗೊಳಗಾದ ನೀರಿನ ಪೈಪ್‌ಲೈನ್‌ ದುರಸ್ತಿಪಡಿಸಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಜನರ ಅನುಕೂಲಕ್ಕೆ ತಕ್ಕಂತೆ ಕಾಮಗಾರಿ :

ಈ ಕುರಿತು ಪ್ರತಿಕ್ರಿಯಿಸಿದ ಕುರೆಕುಪ್ಪ ಪುರಸಭೆ ಮುಖ್ಯಾಧಿಕಾರಿ ಅರುಣ್ ಕುಮಾರ್, 5ನೇ ವಾರ್ಡ್‌ನಲ್ಲಿ ನೂತನ ಚರಂಡಿ ನಿರ್ಮಾಣ ಕಾಮಗಾರಿ ಈಗಾಗಲೇ ಆರಂಭವಾಗಿದೆ. ಕಾಮಗಾರಿಯನ್ನು ಜನರ ಅನುಕೂಲಕ್ಕೆ ತಕ್ಕಂತೆ ಕೈಗೊಳ್ಳಲಾಗುವುದು. ವಾರ್ಡ್‌ನಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನೂ ಶೀಘ್ರ ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು.

ಕಾಮಗಾರಿ ವೇಳೆ ಸ್ಥಳೀಯರಿಗೆ ತೊಂದರೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ಚರಂಡಿ, ರಸ್ತೆ ಹಾಗೂ ಕುಡಿಯುವ ನೀರಿನ ಸಮಸ್ಯೆಗಳನ್ನು ಸಮಗ್ರವಾಗಿ ಪರಿಹರಿಸಿ ಮೂಲಸೌಕರ್ಯ ಕಲ್ಪಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಹೊನ್ನೂರಪ್ಪ, ನಾಗರಾಜ, ಲಕ್ಷ್ಮಿ, ಶಾಂತಮ್ಮ, ಅಂಜಿನಪ್ಪ ಸೇರಿದಂತೆ ಹಲವರು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News