ಬಳ್ಳಾರಿ/ಕಂಪ್ಲಿ: ಮತದಾರರ ಪಟ್ಟಿಯಿಂದ ಅಕ್ರಮವಾಗಿ ಹೆಸರುಗಳನ್ನು ಕೈಬಿಡಲು ಚುನಾವಣಾ ಆಯೋಗದ ಫಾರ್ಮ್-7 ಅರ್ಜಿಯನ್ನು ದುರ್ಬಳಕೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಕಂಪ್ಲಿ ಹಾಗೂ ಕೋಟೆ ಭಾಗದ ಯುವಕರು ಮತ್ತು ಸಾರ್ವಜನಿಕರು ಸೋಮವಾರ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ಕಂಪ್ಲಿ ಕೋಟೆ ಹಾಗೂ ವಿವಿಧ ವಾರ್ಡ್‌ಗಳ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲು ಅರ್ಜಿಗಳನ್ನು ಸಲ್ಲಿಸಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಕೆಲವು ಪ್ರದೇಶಗಳಲ್ಲಿ ಮುಸ್ಲಿಂ ಸಮುದಾಯದ ಮತದಾರರನ್ನು ಗುರಿಯಾಗಿಸಿಕೊಂಡು, ಅವರ ಅನುಮತಿಯಿಲ್ಲದೆ ಫಾರ್ಮ್-7 ಅಡಿಯಲ್ಲಿ ಆಕ್ಷೇಪಣೆ ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂದು ಸ್ಥಳೀಯರು ದೂರಿದರು.

ಕೆಲವರು ರಾಜಕೀಯ ಪ್ರಭಾವ ಬಳಸಿ ಈ ರೀತಿಯ ಅರ್ಜಿಗಳನ್ನು ಸಲ್ಲಿಸುತ್ತಿದ್ದಾರೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಯಾವುದೇ ಅರ್ಹ ಮತದಾರರ ಹೆಸರನ್ನು ಪಟ್ಟಿಯಿಂದ ಕೈಬಿಡಬಾರದು ಎಂದು ಒತ್ತಾಯಿಸಿದರು. ಅಧಿಕಾರಿಗಳು ಒತ್ತಡಕ್ಕೆ ಮಣಿದು ಅರ್ಜಿಗಳನ್ನು ಅಂಗೀಕರಿಸಿದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಪೊಲೀಸರು ಹಾಗೂ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದರು. ನಿಯಮಾನುಸಾರ ಪರಿಶೀಲನೆ ನಡೆಸದೇ ಯಾವುದೇ ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕುವುದಿಲ್ಲ ಎಂದು ಅಧಿಕಾರಿಗಳು ಭರವಸೆ ನೀಡಿದ ಬಳಿಕ ಪರಿಸ್ಥಿತಿ ತಿಳಿಯಾಯಿತು.

ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿದ ಕಂಪ್ಲಿ ತಹಶೀಲ್ದಾರ್ ಜೂಗಲ್ ಮಂಜುನಾಯಕ್, “ಸಾರ್ವಜನಿಕರ ಬಳಿ ಹರಿದಾಡುತ್ತಿರುವ ಅರ್ಜಿಗಳು ನಮ್ಮ ಅಧಿಕೃತ ದಾಖಲೆಗಳಲ್ಲ. ಯಾವುದೇ ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕಲು ನಿಗದಿತ ಕಾನೂನು ಪ್ರಕ್ರಿಯೆ ಇದೆ. ಸಂಬಂಧಪಟ್ಟ ಮತದಾರರಿಗೆ ನೋಟಿಸ್ ನೀಡದೇ ಹೆಸರು ಅಳಿಸುವ ಪ್ರಶ್ನೆಯೇ ಇಲ್ಲ,” ಎಂದು ಸ್ಪಷ್ಟಪಡಿಸಿದರು.

ಎಸ್‌ಐಆರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ಹರಡುವುದು ಅಥವಾ ಅನಗತ್ಯ ಗೊಂದಲ ಸೃಷ್ಟಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ಎಚ್ಚರಿಕೆ ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor